ಬೆಂಗಳೂರು, ಅ 20 (DaijiworldNews/HR): ಹಿರಿಯೂರು ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಪೂರ್ಣಿಮಾ ಶ್ರೀನಿವಾಸ್ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸೇರ್ಪಡೆಯಾಗಿದ್ದಾರೆ.
ಪೂರ್ಣಿಮಾ ಮತ್ತು ಶ್ರೀನಿವಾಸ್ ಸಾಮಾಜಿಕ ನ್ಯಾಯದ ಪರವಾಗಿರುವವರು. ಒಲ್ಲದ ಮನಸ್ಸಿನಿಂದ ಬಿಜೆಪಿ ಯಲ್ಲಿದ್ದರು. ಈಗ ಕಾಂಗ್ರೆಸ್ ಗೆ ಬಂದಿದ್ದಾರೆ. ಇವರಿಗೆ ರಾಜಕೀಯವಾಗಿ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅಭಯ ನೀಡಿದ್ದಾರೆ.
ಇನ್ನು ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳ ಪರವಾಗಿರುವ ಏಕೈಕ ರಾಷ್ಟ್ರೀಯ ಪಕ್ಷ ನಮ್ಮ ಕಾಂಗ್ರೆಸ್. ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಧ್ವನಿಯಾಗಿ ಎ.ಕೃಷ್ಣಪ್ಪ, ಪೂರ್ಣಿಮಾ ಮತ್ತು ಶ್ರೀನಿವಾಸ್ ಮೊದಲಿನಿಂದಲೂ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಬಿಜೆಪಿ ಜಾತಿ ತಾರತಮ್ಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಎಲ್ಲಾ ಜಾತಿಯ ಬಡವರು ಮತ್ತು ಶೂದ್ರ ಸಮುದಾಯದವರು ಇದನ್ನು ಸರಿಯಾಗಿ ಅರ್ಥ ಮಾಡಿಕೊಂಡು ರಾಜಕೀಯ ನಿಲುವು ತೆಗೆದುಕೊಳ್ಳಬೇಕು ಎಂದು ಕರೆ ನೀಡಿದರು.