ಬೆಂಗಳೂರು, ಅ 24 (DaijiworldNews/AK): ರಾಮನಗರ ಜಿಲ್ಲೆಯಿಂದ ಕನಕಪುರ ತಾಲೂಕನ್ನು ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಸರಿಯಲ್ಲ. ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಅವರು ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಬರೆದು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಕನಕಪುರ ಸುತ್ತಮುತ್ತ ಇರುವ ತಮ್ಮ ಆಸ್ತಿಗಳ ಮೌಲ್ಯವನ್ನು ಹೆಚ್ಚಿಸಿಕೊಂಡು ತಮ್ಮ ಖಜಾನೆ ವೃದ್ಧಿ ಮಾಡಿಕೊಳ್ಳುವ ಏಕೈಕ ದುರುದ್ದೇಶದಿಂದ ಅವರು ಕನಕಪುರ ಜನರ ನೆಪ ಹೇಳಿಕೊಂಡು ಈ ಹೊಸ ನಾಟಕ ಶುರು ಮಾಡಿದ್ದಾರೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಎಕ್ಸ್ ಪೋಸ್ಟ್ನಲ್ಲಿ ಗುಡುಗಿದ್ದಾರೆ.
ಕನಕಪುರದವರು ರಾಮನಗರ ಜಿಲ್ಲೆಯವರಲ್ಲ, ಬೆಂಗಳೂರು ಜಿಲ್ಲೆಯವರು ಎಂಬುದನ್ನು ನೆನಪಿಟ್ಟುಕೊಳ್ಳಿ ಎನ್ನುವ ಅವರ ಮಾತು ರಾಮನಗರ ಜಿಲ್ಲೆಗೆ ಎಸಗುವ ಮಹಾದ್ರೋಹ. ಅಷ್ಟೇ ಅಲ್ಲ, ಕನಕಪುರ ಜನರಿಗೆ ಮಂಕುಬೂದಿ ಎರಚುವ ಹುನ್ನಾರ ಎಂದು ಕಿಡಿಕಾರಿದ್ದಾರೆ
ನಿಮ್ಮ ಜೇಬಿಗೆ ನಾನು ನೇರವಾಗಿ ದುಡ್ಡು ಹಾಕಲು ಆಗುವುದಿಲ್ಲ, ಮನೆ ಕಟ್ಟಿಸಿಕೊಡಲು ಆಗುವುದಿಲ್ಲ ಎನ್ನುವ ಇವರು, ಇಷ್ಟು ದಿನ ಶಾಸಕರಾಗಿ, ಸಚಿವರಾಗಿ, ಉಪಮುಖ್ಯಮಂತ್ರಿ ಆಗಿ ಮಾಡಿದ್ದೇನು? ತಮ್ಮ ಜೇಬು ತುಂಬಿಸಿಕೊಂಡಿದ್ದು, ತಮ್ಮ ಮನೆಯನ್ನು ಉದ್ಧಾರ ಮಾಡಿಕೊಂಡಿದ್ದಷ್ಟೇ. ಇಷ್ಟಕ್ಕೂ ಕನಕಪುರ ಸುತ್ತಮುತ್ತ ಯಾರ ಆಸ್ತಿಗಳಿವೆ? ಅದರಲ್ಲಿ ಬೇನಾಮಿಗಳು ಎಷ್ಟು? ಎಲ್ಲೆಲ್ಲಿ ಅಕ್ರಮವಾಗಿ ಬೇಲಿ ಹಾಕಲಾಗಿದೆ? ಅವೆಲ್ಲಾ ಅಕ್ರಮಗಳನ್ನು ಸಕ್ರಮ ಮಾಡಿಕೊಳ್ಳಲು ಬೆಂಗಳೂರು ಸೇರ್ಪಡೆಯ ನಾಟಕ! ಈಗಾಗಲೇ ಕನಕಪುರಕ್ಕೆ ಒಂದು ಮೆಡಿಕಲ್ ಕೊಟ್ಟಿದ್ದರೂ ರಾಮನಗರ ಮೆಡಿಕಲ್ ಕಾಲೇಜನ್ನು ಕದ್ದು ಒಯ್ಯವುದರ ಹಿಂದೆಯೂ ಇದೇ ದುಷ್ಟ ತಂತ್ರ ಅಡಗಿತ್ತು.
ಕನಕಪುರಕ್ಕೆ 52 ಕಿ.ಮೀ ದೂರದಲ್ಲಿದೆ ಬೆಂಗಳೂರು. 25 ಕಿ.ಮೀ ದೂರದಲ್ಲಿದೆ ರಾಮನಗರ. ಜನರಿಗೆ ಯಾವುದು ಅನುಕೂಲ? ದಿನ ಬೆಳಗಾದರೆ ಕನಕಪುರದವರು ಬೆಂಗಳೂರಿಗೆ ಅಲೆಯಬೇಕೆ? ಉಪ ಮುಖ್ಯಮಂತ್ರಿಗಳ ಒಳ ಉದ್ದೇಶದ ಬಗ್ಗೆ ಅನೇಕ ಅನುಮಾನಗಳು ಸಹಜವಾಗಿಯೇ ಮೂಡುತ್ತವೆ ಎಂದು ಹೇಳಿದ್ದಾರೆ.