ವಿಜಯನಗರ, ಅ 30 (DaijiworldNews/MS): ಆಂಧ್ರಪ್ರದೇಶದ ವಿಜಿನಗರಂ ಜಿಲ್ಲೆಯಲ್ಲಿ ಭಾನುವಾರ ಸಂಜೆ ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಸಾವಿನ ಸಂಖ್ಯೆ 13 ಕ್ಕೆ ಏರಿದ್ದು,50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ವಿಜಯನಗರ ಜಿಲ್ಲೆಯಲ್ಲಿ ನಿನ್ನೆ ಸಂಜೆ 7 ಗಂಟೆ ವೇಳೆಗೆ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ರೈಲು, ತಾಂತ್ರಿಕ ದೋಷದಿಂದಾಗಿ ಸಿಗ್ನಲ್ ಗೆ ಕಾಯುತ್ತಿದ್ದಾಗ ವಿಶಾಖಪಟ್ಟಣಂ-ರಾಯಗಢ ಪ್ಯಾಸೆಂಜರ್ ರೈಲು ಹಿಂದಿನಿಂದ ಢಿಕ್ಕಿ ಹೊಡೆದಿತ್ತು. ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ಮತ್ತು ಟ್ರ್ಯಾಕ್ ಪುನಃಸ್ಥಾಪನೆ ಕಾರ್ಯ ಮುಂದುವರಿದಿದೆ. ಘಟನೆಯ ಬೆನ್ನಲ್ಲೇ 12 ರೈಲುಗಳನ್ನು ರದ್ದುಗೊಳಿಸಲಾಗಿದೆ, ಹಲವಾರು ರೈಲುಗಳ ಮಾರ್ಗಗಳನ್ನು ಬದಲಾಯಿಸಲಾಗಿದೆ.
ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ, ಅಪಘಾತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೆ 10 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರ ನೀಡಲಿದೆ ಎಂದು ಹೇಳಿದ್ದಾರೆ. ಬೇರೆ ರಾಜ್ಯಗಳ ಜನರು ಸಾವನ್ನಪ್ಪಿದರೆ, ದುಃಖಿತ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ರೂ. 50,000 ಪರಿಹಾರವನ್ನು ನೀಡಲಾಗುತ್ತದೆ ಎಂದು ಸಿಎಂ ಕಚೇರಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.