ಬೆಂಗಳೂರು, ನ 11 (DaijiworldNews/PC): ಬಿ ವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಬಗ್ಗೆ ಪ್ರತಿಕ್ರಿಯಿಸಿದ ತಂದೆ ಬಿ ಎಸ್ ಯಡಿಯೂರಪ್ಪ ವಿಜಯೇಂದ್ರ ನೇಮಕದ ಬಗ್ಗೆ ನನಗೆ ಗೊತ್ತೇ ಇರಲಿಲ್ಲ. ಯಾರನ್ನು ಬೇಕಾದರೂ ಕೇಳಿ ನೋಡಿ, ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಮಾಡಿ ಎಂದು ನಾನು ಒಂದು ದಿನವೂ ದೆಹಲಿಗೆ ಹೋಗಿ ಕೇಳಲಿಲ್ಲ, ಹೈಕಮಾಂಡ್ ಮುಂದೆಯೂ ಮನವಿ ಮಾಡಿರಲಿಲ್ಲ. ಹಲವು ವಿಚಾರಗಳನ್ನು ಅಳೆದು ತೂಗಿ ಹೈಕಮಾಂಡ್ ಸರಿಯಾದ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿರಾರರೊಂದಿಗೆ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಬಿಜೆಪಿಗೆ ಸಂಬಂಧಪಟ್ಟಂತೆ ಬಹಳ ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದು, ಸೂಕ್ತ ಸಮಯದಲ್ಲಿ ರಾಜ್ಯಾಧ್ಯಕ್ಷರ ನೇಮಕ ಮಾಡಿದ್ದಾರೆ ಎಂದು ಹೇಳಿದ್ದಾರೆ.
ವಿಜಯೇಂದ್ರ ಅಧ್ಯಕ್ಷರಾದ ಮೇಲೆ ವೀರಶೈವ ಲಿಂಗಾಯತ ಸಮಾಜ ಸಮಾಜದ ಬೆಂಬಲ ಇನ್ನೂ ಹೆಚ್ಚು ಸಿಗಲಿದೆ. ಮುಂದಿನ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಅತಿಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಿ ಅವರಿಗೆ ಒಳ್ಳೆಯ ಉಡುಗೊರೆ ಕೊಡಬೇಕೆಂಬುದು ನಮ್ಮ ಗುರಿಯಾಗಿದೆ. ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆ ನಿಟ್ಟಿನಲ್ಲಿ ಇನ್ನಷ್ಟು ಕೆಲಸ ಮಾಡುವುದಾಗಿ ಯಡಿಯೂರಪ್ಪ ಹೇಳಿದರು.