ಬೆಂಗಳೂರು, ನ 16 (DaijiworldNews/RA): ಮಾಜಿ ಸಿಎಂ ಕುಮಾರಸ್ವಾಮಿಯವರ ಬೆಂಗಳೂರಿನ ಜೆಪಿ ನಗರದಲ್ಲಿರುವ ನಿವಾಸಕ್ಕೆ ದೀಪಾವಳಿಯ ದೀಪಾಲಂಕಾರಕ್ಕಾಗಿ ಅನಧಿಕೃತವಾಗಿ ವಿದ್ಯುತ್ ಪಡೆದ ಆರೋಪಕ್ಕೆ ಸಂಬಂಧಿಸಿ ಬೆಸ್ಕಾಂ ದಂಡ ವಿಧಿಸಿದೆ ಎಂದು ತಿಳಿದು ಬಂದಿದೆ.
ದೀಪಾವಳಿಯ ಸಂದರ್ಭ ಕುಮಾರಸ್ವಾಮಿಯವರು ತಮ್ಮ ಮನೆಗೆ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ಆರೋಪವನ್ನು ಕಾಂಗ್ರೆಸ್ ಮಾಡಿತ್ತು. ಇದಾದ ಬಳಿಕ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರ ಮನೆಗೆ ತೆರಳಿ ಪರಿಶೀಲನೆ ಮಾಡಿ ಬರೊಬ್ಬರಿ 68 ಸಾವಿರ ದಂಡವನ್ನು ವಿಧಿಸಿದ್ದು, ಅದನ್ನು ಏಳು ದಿನಗಳೊಳಗಾಗಿ ಕಟ್ಟುವಂತೆ ಸೂಚಿಸಿದೆ ಎಂದು ತಿಳಿದು ಬಂದಿದೆ.
ಇನ್ನು ಈ ವಿಚಾರಕ್ಕೆ ಸಂಬಂಧಪಟ್ಟಂತೆ ಕುಮಾರಸ್ವಾಮಿಯವರು ಪ್ರತಿಕ್ರಿಯೆ ನೀಡಿದ್ದು ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು.
ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದರು. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನವೆಂಬರ್ 13 ರ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ ಎಂದಿದ್ದರು.