ಬೆಂಗಳೂರು, ಏ 16 (Daijiworld News/SM): ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಕಾಂಗ್ರೆಸ್-ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಇಡೀ ದಿನ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿದ್ದು, ಇಂದು ಸಂಜೆ ೬ ಗಂಟೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ.
ಗುರುವಾರ ಬೆಳಗ್ಗೆ 7ರಿಂದ ಸಂಜೆ 6ರ ವರೆಗೆ ಮತದಾನ ನಡೆಯಲಿದ್ದು, ಮತದಾನಕ್ಕೆ 48 ಗಂಟೆಗಳ ಮುಂಚೆ ಮಂಗಳವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಕೊನೆಗೊಂಡಿದೆ. ಮೊದಲ ಹಂತದಲ್ಲಿ ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೋಲಾರ, ಚಿಕ್ಕ ಬಳ್ಳಾಪುರ, ತುಮಕೂರು, ಹಾಸನ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ದಕ್ಷಿಣ, ಉತ್ತರ, ಕೇಂದ್ರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಇನ್ನು ಬಹಿರಂಗ ಪ್ರಚಾರದಲ್ಲಿ ತೊಡಗಿದ್ದ ಸ್ಟಾರ್ ಪ್ರಚಾರಕರು, ಪಕ್ಷದ ಹಿರಿಯ ಮುಖಂಡರು ಹಾಗೂ ನಾಯಕರು ತಮ್ಮ ಪ್ರಚಾರ ಕೊನೆಗೊಳಿಸಿ ಹಿಂತಿರುಗಿದ್ದಾರೆ.
ಇನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಪ್ರಬಲ ರಾಜಕೀಯ ಪಕ್ಷಗಳು ಬಿಜೆಪಿ ಮತ್ತು ಕಾಂಗ್ರೇಸ್ ಯಾವುದೇ ಅಬ್ಬರದ ಪ್ರಚಾರ ದಲ್ಲಿ ತೊಡಗಿಸಿಕೊಂಡಿರಲಿಲ್ಲ. ಸ್ಟಾರ್ ಪ್ರಚಾರಕರೂ ಕೂಡಾ ಬಂಟ್ವಾಳಕ್ಕೆ ಕಾಲಿಡಲಿಲ್ಲ, ಪ್ರತಿ ಎಲೆಕ್ಸನ್ ಟೈಮ್ ನಲ್ಲಿ ಏನಾದರೊಂದು ಕಿರಿಕ್ ಕಾಣುತ್ತಿದ್ದ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಈ ಬಾರಿಯ ಲೋಕಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಸಪ್ಪೆಯಾದಂತೆ ತೋರುತ್ತಿದೆ.