ಬೆಂಗಳೂರು, ಡಿ 08 (DaijiworldNews/AA): ಹಿರಿಯ ನಟಿ ಲೀಲಾವತಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಕುಮಾರ್ ಅವರೊಂದಿಗೆ ಮಾತನಾಡಿದ್ದೆ ಎಂದಿದ್ದಾರೆ.
ಹಲವು ದಶಕಗಳ ಕಾಲ ತಮ್ಮ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಇನ್ನು ನಟಿ ಲೀಲಾವತಿ ಅಗಲಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಿರಿಯ ನಟ ದ್ವಾರಕೀಶ್ ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.