ಬೆಳಗಾವಿ, ಡಿ 15 (DaijiworldNews/AA): ಬೆಳಗಾವಿಯ ವಂಟಮೂರಿನಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಘಟನೆ ಸಂಬಂಧ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು 5 ಸದಸ್ಯರನ್ನೊಳಗೊಂಡ ಸತ್ಯ ಶೋಧನಾ ಸಮಿತಿಯನ್ನು ರಚಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಹಿಂದೆ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ಕೂಡ ದಾಖಲಿಸಿಕೊಂಡಿದೆ.
ಸಮಿತಿಯ ಸದಸ್ಯರಿಗೆ ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ. ಅಮಾನನೀಯ ಘಟನೆಯನ್ನು ಖಂಡಿಸಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದಲೂ ಈ ರೀತಿಯ ಘಟನೆಗಳು ನಡೆಯುತ್ತಿವೆ. ಅದರಲ್ಲೂ ಮಹಿಳೆಯರ ಮೇಲೆ ಇಂತಹ ಘೋರವಾದ ಅಪರಾಧಗಳು ನಡೆಯುತ್ತಲೇ ಇವೆ. ಹಾಗೂ ಈ ರೀತಿಯ ಘೋರ ಅಪರಾಧಗಳನ್ನು ತಡೆಗಟ್ಟುವಲ್ಲಿ ಕಾಂಗ್ರೆಸ್ ಸರ್ಕಾರ ಬೇಜವಾಬ್ದಾರಿ ತೋರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಜೆಪಿ ನಡ್ಡಾ ಅವರು ರಚಿಸಿರುವ 5 ಸದಸ್ಯರನ್ನೊಳಗೊಂಡ ಸತ್ಯ ಶೋಧನಾ ಸಮಿತಿ ಸಂಸದೆ ಅಪ್ರಜಿತಾ ಸಾರಂಗಿ, ಸಂಸಂದೆ ಸುನಿತಾ ದುಗ್ಗಲ್, ಸಂಸದೆ ಲಾಕೆಟ್ ಚಟರ್ಜಿ, ಸಂಸದೆ ರಂಜಿತಾ ಕೋಲಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರಾ ಅವರನ್ನು ಒಳಗೊಂಡಿದೆ.
ಪ್ರಕರಣ ಹಿನ್ನೆಲೆ
ಸಂತ್ರಸ್ತ ಮಹಿಳೆಯ ಮಗ ಹಾಗೂ ಯುವತಿಯೋರ್ವಳು ಓಡಿ ಹೋಗಿದ್ದರು. ಇದರಿಂದ ಆಕ್ರೋಶಗೊಂಡ ಯುವತಿಯ ಕುಟುಂಬಸ್ಥರು, ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದರು. ಜೊತೆಗೆ ಅವರ ಮನೆಯನ್ನು ಸಂಪೂರ್ಣ ಧ್ವಂಸಗೊಳಿಸಿದ್ದರು. ಘಟನೆಯ ನಂತರ ಸಂತ್ರಸ್ತ ಮಹಿಳೆಯನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.