ಬೆಂಗಳೂರು, ಡಿ 23 (DaijiworldNews/MS): ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.
ಬಿಇಒ ಆಂಜಿನಪ್ಪ ನೀಡಿದ ದೂರಿನನ್ವಯ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಹೆಚ್ಎಂ ಲಕ್ಷ್ಮೀದೇವಮ್ಮ ಬಂಧಿಸಿ ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.
ಯಾಬುದೇ ಸುರಕ್ಷತೆ ಇಲ್ಲದೇ, ಆಸಿಡ್ ನಂತಹ ಸ್ವಚ್ಚತಾ ಸಾಮಾಗ್ರಿ ಬಳಸಿ ಮಕ್ಕಳ ಕೈಯಲ್ಲಿ ಶೌಚಾಲಯ ತೊಳೆಸಿದ್ದ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ಸ್ಥಳೀಯ ಶಾಸಕ ಎಸ್ ಟಿ ಸೋಮಶೇಖರ್ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದರು.
ಈಗಾಗಲೇ ಪ್ರಕರಣದ ಗಂಭೀರತೆ ಅರಿತ ಸಚಿವರು ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸುವಂತೆ ಡಿಡಿಪಿಐಗೆ ಸೂಚಿಸಿದ್ದರು. ಈ ಹಿನ್ನಲೆ ಬೆಂಗಳೂರು ಉತ್ತರ ವಿಭಾಗದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ.ಅಂಜನಪ್ಪ ಅವರು, ಸ್ಥಳ ಪರಿಶೀಲನೆ ನಡೆಸಿ, ತಪ್ಪಿತಸ್ಥ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ಇದೀಗ ಶಿಕ್ಷಕಿಯ ಬಂಧನವಾಗಿದೆ.