ಬೆಂಗಳೂರು, ಡಿ 28 (DaijiworldNews/AA): ಸದ್ಯ ರಾಜ್ಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರ ಹೋರಾಟದ ಕಿಚ್ಚು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಮಧ್ಯೆ ಬುಧವಾರ ರಾತ್ರೋರಾತ್ರಿ ಕರವೇ ಅಧ್ಯಕ್ಷ ನಾರಾಯಣ ಗೌಡ ಅವರನ್ನು ಬಂಧಿಸಿ 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಇಂದು ಮುಂಜಾನೆ ನಾರಾಯಣ ಗೌಡ ಸೇರಿ 29 ಮಂದಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು 29 ಮಂದಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ನೀಡಿ ಆದೇಶಿಸಿದ್ದಾರೆ. ಇನ್ನು ಬಂಧಿತರನ್ನು ಪರಪ್ಪನ ಅಗ್ರಹಾರ ಕಾರಗೃಹಕ್ಕೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ಕರವೇ ಅಧ್ಯಕ್ಷ ನಾರಾಯಣ ಗೌಡ ಬಂಧನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಗಳ ಮುಂದೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದು, ಈ ಹಿನ್ನೆಲೆ ಮುಖ್ಯಮಂತ್ರಿ ಮನೆ ಮುಂದೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಜೊತೆಗೆ ಸಿಎಂ ನಿವಾಸ ಹಾಗೂ ಗೃಹ ಕಚೇರಿ ಬಳಿ ಹೆಚ್ಚು ಬ್ಯಾರಿಕೇಡ್ ಹಾಕುವುದರ ಜೊತೆಗೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಇನ್ನು ಇಂದು 10 ಗಂಟೆಯ ಬಳಿಕ ಬೆಂಗಳೂರು ನಗರದ ಹಲವೆಡೆ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.