ಲಕ್ನೋ, ಡಿ 28 (DaijiworldNews/AA): ಅಯೋಧ್ಯೆಯಲ್ಲಿ ರಾಮಮಂದಿರ ಜ.22 ರಂದು ಉದ್ಘಾಟನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದ್ದು, ಅಯೋಧ್ಯೆಯನ್ನು ಮದುಮಗಳಂತೆ ಸಿಂಗರಿಸಲಾಗುತ್ತಿದೆ. ಈ ಮಧ್ಯೆ ರಾಮನ ಪ್ರಾಣ ಪ್ರತಿಷ್ಠೆಗೂ ಮುನ್ನ ಸಿಎಂ ಯೋಗಿ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
ಉತ್ತರ ಪ್ರದೇಶದ ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಸಿಎಂ ಯೋಗಿ ಸರ್ಕಾರ ಘೋಷಣೆ ಮಾಡಿದೆ.
ಈ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತದೆ. ಅಷ್ಟೇ ಅಲ್ಲದೇ ಈಗಾಗಲೇ ಇರುವ ಮದ್ಯದಂಗಡಿಗಳನ್ನು ಅಲ್ಲಿಂದ ಸ್ಥಳಾಂತರಿಸಲಾಗುತ್ತದೆ ಎಂದು ಉತ್ತರ ಪ್ರದೇಶದ ಅಬಕಾರಿ ಸಚಿವ ನಿತಿನ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ಅಯೋಧ್ಯೆಯ ಜೊತೆಗೆ ಫೈಜಾಬಾದ್, ಬಸ್ತಿ, ಅಂಬೇಡ್ಕರ್ ನಗರ ಹಾಗೂ ಸುಲ್ತಾನ್ಪುರ ಪ್ರದೇಶಗಳು ಕೂಡ ಈ ವ್ಯಾಪ್ತಿಗೆ ಒಳಪಡುತ್ತದೆ. ಆದ್ದರಿಂದ ಈ ಪ್ರದೇಶಗಳಲ್ಲೂ ಮದ್ಯ ಮಾರಾಟ ನಿಷೇಧಿಸಲಾಗುತ್ತದೆ. ಹಾಗೂ ಅಲ್ಲಿರುವಂತಹ ಮದ್ಯದಂಗಡಿಗಳನ್ನು ಸ್ಥಳಾಂತರಿಸಲಾಗುತ್ತದೆ. ಮದ್ಯದಂಗಡಿಗಳನ್ನು ಸ್ಥಳಾಂತರ ಮಾಡುವಂತೆ ಈಗಾಗಲೇ ಅಬಕಾರಿ ಇಲಾಖೆಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರನ್ನು ಭೇಟಿ ಮಾಡಿದ ಬಳಿಕ ಈ ಮಾಹಿತಿ ಹಂಚಿಕೊಂಡಿದ್ದಾರೆ.