ಬೆಂಗಳೂರು, ಜ 05 (DaijiworldNews/AA): ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ರನ್ನು ಲೋಕಾಯುಕ್ತ ತನಿಖೆಗೆ ವಹಿಸುವಂತೆ ಸರ್ಕಾರ ಆದೇಶ ನೀಡಿತ್ತು. ಈ ಆದೇಶದ ವಿರುದ್ಧ ಇಂದು ಸಿಬಿಐ ಸಿಬಿಐ ಹೈಕೋರ್ಟ್ ಗೆ ಮನವಿ ಸಲ್ಲಿಸಿದೆ.
ಈ ಹಿಂದೆ ಡಿಕೆಶಿ ವಿರುದ್ಧ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಸಿಬಿಐ ತನಿಖೆಗೆ ಸಮ್ಮತಿ ಸೂಚಿಸಿತ್ತು. ಸರ್ಕಾರದ ಸಮ್ಮತಿ ಮೇರೆಗೆ ಸಿಬಿಐ ಎಫ್ ಐಆರ್ ದಾಖಲಿಸಿತ್ತು. ಇದೀಗ ಸರ್ಕಾರ ಪ್ರಕರಣದ ತನಿಖೆಗೆ ನೀಡಿರುವ ಸಮ್ಮತಿಯನ್ನು ಹಿಂಪಡೆದು ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಪೊಲೀಸರಿಗೆ ನೀಡಿದೆ. ಸರ್ಕಾರದ ಈ ನಡೆಯನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಹಾಗೆ ಈ ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆ ಸಿಬಿಐ ಮನವಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಸಿಬಿಐ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ಡಿಕೆಶಿ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಶಾಸಕ ಯತ್ನಾಳ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸಹ ನಡೆಯಲಿದೆ.
ಇನ್ನು ಸಿಬಿಐ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆಶಿ ಅರ್ಜಿ ಸಲ್ಲಿಸಲು ಸಿಬಿಐಗೆ ಹಕ್ಕಿದೆ. ನಾವು ಕೂಡ ವಾದ ಮಾಡುತ್ತೇವೆ. ನಮಗೆ ಕೋರ್ಟ್ ನ ಮೇಲೆ ಗೌರವವಿದೆ. ಕೋರ್ಟ್ ನಿರ್ಧಾರ ಮಾಡುತ್ತದೆ ಎಂದು ಹೇಳಿದರು.