ಬೆಂಗಳೂರು, ಜ 07 (DaijiworldNews/HR): ಕರ್ನಾಟಕದ ಅಂಗಡಿ ಮುಂಗಟ್ಟು ಮತ್ತು ವ್ಯಾಪಾರ ಮಳಿಗೆಗಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ 60 ರಷ್ಟು ಕನ್ನಡ ಬಳಕೆ ಮಾಡಬೇಕು ಎಂದು ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿದೆ.
ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಹಾಗೂ ಜಾಹೀರಾತು, ಸೂಚನಾ ಫಲಕಗಳಲ್ಲೂ ಕನ್ನಡಕ್ಕೆ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯಿದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.