ಬೆಂಗಳೂರು,ಏ 22 (Daijiworld News/MSP): ಮಂಗಳವಾರ ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಹೀಗಾಗಿ ಎಲ್ಲಾ 14 ಕ್ಷೇತ್ರದಲ್ಲೂ ಸಂಜೆ ಆರು ಗಂಟೆಗೆ ಬಹಿರಂಗ ಪ್ರಚಾರ ಮುಕ್ತಾಯವಾಗುತ್ತಿದ್ದಂತೆ ಪ್ರಚಾರದಲ್ಲಿ ನಿರತರಾಗಿದ್ದ ನಾಯಕರು ಕ್ಷೇತ್ರ ಬಿಟ್ಟು ರಾಜಧಾನಿಯತ್ತ ಮುಖ ಮಾಡಿದರು.
ರಾಜ್ಯದಲ್ಲಿ ಒಟ್ಟು 14 ಲೋಕಸಭಾ ಕ್ಷೇತ್ರಗಳಾದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗದಲ್ಲಿ ಕಾಂಗ್ರೆಸ್-ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಕಣಕ್ಕಿಳಿದಿದ್ಧಾರೆ.
14 ಲೋಕಸಭಾ ಕ್ಷೇತ್ರಗಳಲ್ಲಿ 28,028 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅವುಗಳಲ್ಲಿ 5,674 ಸೂಕ್ಷ್ಮ, 22,354 ಸಾಮಾನ್ಯ ಮತಗಟ್ಟೆಗಳಿವೆ. ಚುನಾವಣಾ ಕರ್ತವ್ಯಕ್ಕಾಗಿ ಆಯೋಗ ಒಟ್ಟು 90,997 ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿದೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಕೇಂದ್ರ ಸಚಿವ ಅನಂತ್ಕುಮಾರ್ ಹೆಗಡೆ, ರಮೇಶ್ ಜಿಗಜಿಣಗಿ ಸೇರಿದಂತೆ ಹಲವು ಘಟಾನುಘಟಿ ಅಭ್ಯರ್ಥಿಗಳು ಕಣದಲ್ಲಿದ್ಧಾರೆ.