ಬೆಂಗಳೂರು, ಜ 12(DaijiworldNews/AK): ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ವಿಚಾರದಲ್ಲಿ ಯಾವ ಸಚಿವರೂ ಬಹಿರಂಗ ಹೇಳಿಕೆ ನೀಡಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಚ್ಚರಿಸಿದ್ದಾರೆ.
ಲೋಕಸಭಾ ಚುನಾವಣೆ ಸಿದ್ಧತೆ ಸಂಬಂಧ ನವದೆಹಲಿಯಲ್ಲಿ ಎಐಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಕರ್ನಾಟಕ ಹಾಗೂ ತೆಲಂಗಾಣದ ಕಾಂಗ್ರೆಸ್ ಸರ್ಕಾರ ಸಚಿವರ ಸಭೆಯಲ್ಲಿ ಖರ್ಗೆ ಅವರು ಸೂಚನೆ ನೀಡಿದ್ದಾರೆ.
ಕರ್ನಾಟಕದಲ್ಲಿ 4-5 ತಿಂಗಳುಗಳಿಂದ ಉಪ ಮುಖ್ಯ ಮಂತ್ರಿ ಹುದ್ದೆ ವಿಚಾರದಲ್ಲಿ ಕೆಲವು ಸಚಿವರು ಅನಗತ್ಯವಾಗಿ ಹೇಳಿಕೆ ನೀಡುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ. ಇದರಿಂದ ಪಕ್ಷ ಹಾಗೂ ಸರಕಾರದ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ. ಈ ರೀತಿಯ ಸೂಕ್ಷ್ಮ ವಿಚಾರಗಳನ್ನು ಎಲ್ಲಿ ಚರ್ಚಿಸಬೇಕು, ಯಾರೊಂದಿಗೆ ಚರ್ಚಿಸಬೇಕು ಎಂಬುದನ್ನು ಅರ್ಥ ಮಾಡಿಕೊಳ್ಳುವುದು ಸೂಕ್ತ ಎಂದು ಹೇಳಿದರು.
ಈ ವಿಷಯದಲ್ಲಿ ಹೈಕಮಾಂಡ್ ಈಗಾಗಲೇ ತನ್ನ ನಿಲುವು ಏನೆಂಬುದನ್ನು ಸ್ಪಷ್ಟಪಡಿಸಿದ ಬಳಿಕವೂ ಒಂದಿಬ್ಬರು ಮತ್ತೆ ಅದೇ ವಿಷಯಗಳನ್ನು ಕೆಣಕುವ ಮೂಲಕ ಗೊಂದಲದ ವಾತಾವರಣ ನಿರ್ಮಿಸಲು ಪ್ರಯತ್ನಿಸಿದ್ದಾರೆ.ಈ ರೀತಿಯ ವರ್ತನೆಯನ್ನು ಪಕ್ಷ ಇನ್ನು ಮುಂದೆ ಸಹಿಸುವುದಿಲ್ಲ ಎಂದು ಖರ್ಗೆ ಖಡಕ್ ವಾರ್ನಿಂಗ್ ಮಾಡಿದ್ದಾರೆ.
ಪ್ರತಿಯೊಬ್ಬ ಸಚಿವರಿಗೂ ಅತ್ಯಂತ ಮಹತ್ವದ ಜವಾಬ್ದಾರಿಗಳಿವೆ, ಕೊಟ್ಟ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವ ಬದಲಿಗೆ ಅನಗತ್ಯ ವಾಗಿ ಅದರಲ್ಲೂ ಡಿಸಿಎಂ ಹುದ್ದೆ ವಿಚಾರದಲ್ಲಿ ಬಹಿರಂಗ ಹೇಳಿಕೆ ನೀಡಿ ಪಕ್ಷದೊಳಗೆ ಗೊಂದಲದ ವಾತಾ ವರಣ ನಿರ್ಮಿಸುವುದು ಸರಿಯಲ್ಲ ಎಂದು ಹೇಳಿದರು.