ಬೆಂಗಳೂರು, ಜ 13(DaijiworldNews/SK): ನೈತಿಕ ಪೋಲಿಸ್ ಗಿರಿಗೆ ಕಡಿವಾಣ ಹಾಕುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆದರೆ ಹಾವೇರಿಯಲ್ಲಿ ಮಹಿಳೆ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಪ್ರಕರಣ ಏನಾಯಿತು. ಇವರೆಗೂ ನ್ಯಾಯ ದೊರೆತಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಜಂಗಲ್ ರಾಜ್ಯವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾವೇರಿ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಎಸ್ ಐ ಟಿ ರಚನೆ ಮಾಡಬೇಕು. ಹಿರಿಯ ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡಬೇಕು ಹಾಗೂ ಆರೋಪಿಗಳ ವಿರುದ್ದ ಪೋಕ್ಸೋ ಅಡಿಯಲ್ಲಿ ಪ್ರಕರಣದ ದಾಖಲಿಸಿ ಸೂಕ್ತ ಕ್ರಮಕೈಗೊಂಡು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಹೆಣ್ಣುಮಕ್ಕಳು ಆತಂಕದಲ್ಲಿ ಕೆಲಸ ಮಾಡುವ ಪರಿಸ್ಥಿತಿ ಎದುರಾಗಿದೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ನೈತಿಕ ಪೋಲಿಸ್ ಗಿರಿ ನಡೆದಿದೆಯಲ್ವಾ? ಎಂಬ ಪ್ರಶ್ನೆಗೆ ಉತ್ತರಿಸಿದ ಬೊಮ್ಮಯಿ ಅವರು, ಹಾವೇರಿ ಘಟನೆಗೂ ಕರಾವಳಿಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಘಟನೆಗೂ ಅಜಗಾಜಾಂತರ ವ್ಯತ್ಯಾಸವಿದೆ. ಈ ಎರಡು ಪ್ರಕರಣಗಳನ್ನು ಹೋಲಿಕೆ ಮಾಡುವುದು ಸರಿಯಲ್ಲ. ಹಾವೇರಿ ಪ್ರಕರಣದಲ್ಲಿ ಅತ್ಯಾಚಾರದಂತಹ ಹೀನ ಕೃತ್ಯ ನಡೆದಿದೆ ಎಂದು ತಿಳಿಸಿದರು.