ಉತ್ತರ ಪ್ರದೇಶ,ಜ 28 (DaijiworldNews/RA):ಬಾಡಿಗೆ ಮನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಫರೀದ್ಪುರದಲ್ಲಿ ನಡೆದಿದೆ.
ಮೃತರನ್ನು ಅಜಯ್ ಗುಪ್ತಾ (38), ಅವರ ಪತ್ನಿ ಅನಿತಾ (36), ಅವರ ಮಕ್ಕಳಾದ ದಿವ್ಯಾಂಶ್ (9) ಮತ್ತು ದಕ್ಷ್ (3) ಮತ್ತು ಮಗಳು ದಿವ್ಯಾಂಕ (6) ಎಂದು ಗುರುತಿಸಲಾಗಿದೆ.
ಈ ಘಟನೆ ಶನಿವಾರ ರಾತ್ರಿ ನಡೆದಿದ್ದು ಭಾನುವಾರ ಬೆಳಗ್ಗೆ ಮನೆಯಿಂದ ಹೊಗೆ ಬರುತ್ತಿರುವುದನ್ನು ಕಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮನೆ ಬಾಗಿಲು ಹೊಡೆದು ನೋಡಿದಾಗ ಐವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸುಶೀಲ್ ಚಂದ್ರ ಧುಲೆ ಮಾಹಿತಿ ನೀಡಿದರು.
ಇನ್ನು ಈ ಘಟನೆಯ ಕುರಿತು ವಿವರವಾದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದು, ಶವಸಂಸ್ಕಾರದ ಎಲ್ಲಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಜಿಲ್ಲಾಧಿಕಾರಿ ರವೀಂದ್ರ ಕುಮಾರ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.