ಬೆಂಗಳೂರು,ಫೆ 14 (DaijiworldNews/ AK): ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿದೆ ಎಂಬ ಕಾರಣಕ್ಕಾಗಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧ 10 ಸಾವಿರ ರೂಪಾಯಿ ದಂಡ ವಿಧಿಸಿದೆ. ಇದನ್ನು ಪ್ರಶ್ನಿಸಿ ಸಿಎಂ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸಿದ್ದ ಅಂದಿನ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ 2022ರ ಏಪ್ರಿಲ್ 14ರಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಅದರ ನೇತೃತ್ವವನ್ನು ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ವಹಿಸಿದ್ದರು.
ಮೃತ ಸಂತೋಷ್ ಬರೆದಿಟ್ಟಿದ್ದ ಡೆತ್ನೋಟ್ನಲ್ಲಿ ಅಂದಿನ ಸಚಿವ ಕೆ.ಎಸ್. ಈಶ್ವರಪ್ಪ ಅವರ ಹೆಸರನ್ನು ಉಲ್ಲೇಖ ಮಾಡಲಾಗಿತ್ತು. ಹೀಗಾಗಿ ನೈತಿಕ ಹೊಣೆ ಹೊತ್ತು ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆಯನ್ನು ಕಾಂಗ್ರೆಸ್ ನಾಯಕರು ಮಾಡಿದ್ದರು.
ಪ್ರತಿಭಟನೆ ವೇಳೆ ಸಾರ್ವಜನಿಕ ಮುಕ್ತ ಸಂಚಾರಕ್ಕೆ ಅಡ್ಡಿ ಪಡಿಸಿದೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದೆ ಎಂದು ಆರೋಪದ ಮೇಲೆ ನಗರದ ಹೈ ಗ್ರೌಂಡ್ಸ್ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.
ತಮಗೆ ದಂಡ ವಿಧಿಸಿರುವ ಬಗ್ಗೆ, ಕೋರ್ಟ್ಗೆ ಹಾಜರಾಗುವಂತೆ ಸೂಚನೆ ನೀಡಿದ ಹಿನ್ನಲೆ ಇದೀಗ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.