ಬೆಂಗಳೂರು, ಫೆ 16(DaijiworldNews/SK): ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ಬರುವ ರಾಜ್ಯದ ವಸತಿ ಶಾಲಾ-ಕಾಲೇಜುಗಳಲ್ಲಿ ಇನ್ನು ಮುಂದೆ ಧಾರ್ಮಿಕ ಆಚರಣೆಗಳನ್ನು ಹಾಗೂ ಹಬ್ಬಗಳನ್ನು ಆಚರಣೆ ಮಾಡಬಾರದು ಎಂದು ಹೊರಡಿಸಿದ್ದ ಆದೇಶವನ್ನು ಸರ್ಕಾರ ಹಿಂಪಡೆದಿದೆ.
ಫೆ. 13 ರಂದು ಸರ್ಕಾರದ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಯಾವುದೇ ಧರ್ಮದ ಧಾರ್ಮಿಕ ಹಬ್ಬಗಳನ್ನು ಇನ್ನು ಮುಂದೆ ವಸತಿ ಶಾಲಾ-ಕಾಲೇಜುಗಳಲ್ಲಿ ಆಚರಣೆ ಮಾಡದಂತೆ ಸುತ್ತೋಲೆ ಹೊರಡಿಸಿತ್ತು.
ಸುತ್ತೋಲೆಯಲ್ಲಿ ಕೇವಲ 10 ರಾಷ್ಟ್ರೀಯ ಹಬ್ಬಗಳಾದ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ, ಗಾಂಧಿ ಜಯಂತಿ, ಕನ್ನಡ ರಾಜ್ಯೋತ್ಸವ, ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ, ವಾಲ್ಮೀಕಿ ಜಯಂತಿ, ಕನಕದಾಸ ಜಯಂತಿ, ಬಸವ ಜಯಂತಿ, ಸಂವಿಧಾನ ಜಯಂತಿ, ಯೋಗ ದಿನಾಚರಣೆಯನ್ನು ಆಚರಿಸಲು ಅವಕಾಶ ನೀಡಲಾಗಿತ್ತು.
ಆದರೆ ಇದೀಗ ಈ ವಿಷಯದ ಕುರಿತು ತೀವ್ರವಾಗಿ ಚರ್ಚೆಯಾದ ಹಿನ್ನೆಲೆಯಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಇದಕ್ಕೆ ಆಕ್ಷೇಪಣೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಆದೇಶವನ್ನು ವಾಪಸ್ ಪಡೆದಿದೆ.