ನವದೆಹಲಿ, ಫೆ 24(DaijiworldNews/AA): ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸುಳ್ಳು ಸುದ್ದಿ, ಫ್ಯಾಕ್ಟ್ ಚೆಕ್ಕಿಂಗ್ ತಡೆಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ (ಎಐ) ಬಳಸಲು ಹಾಗೂ ಮಾರ್ಚ್ 13ರ ನಂತರ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಈ ಬಾರಿಯ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಅನುಕೂಲವಾಗುವಂತೆ ಎಐ ತಂತ್ರಜ್ಞಾನವನ್ನು ಬಳಸಲು ನಿರ್ಧರಿಸಲಾಗಿದೆ. ಚುನಾವಣೆಯ ಹಿನ್ನೆಲೆ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳ ತಂಡ ಕಳೆದ ಕೆಲ ತಿಂಗಳಿಂದ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸುತ್ತಿದೆ. ಈ ಸಭೆಯಲ್ಲಿ ಸಮಸ್ಯೆ ಇರುವ ಸೂಕ್ಷ್ಮ ಪ್ರದೇಶಗಳು, ವಿದ್ಯುನ್ಮಾನ ಮತಯಂತ್ರಗಳ ಸಾಗಣೆಗೆ ಬೇಕಿರುವ ಅಗತ್ಯ ಭದ್ರತಾ ಸಿಬ್ಬಂದಿ ಮತ್ತು ಗಡಿಗಳಲ್ಲಿ ತಪಾಸಣೆ ಬಿಗಿಗೊಳಿಸಲು ಅಗತ್ಯವಿರುವ ಮೂಲ ಸೌಕರ್ಯ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ಮಾಡಲಾಗಿದೆ ಎಂದು ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.
ಚುನಾವಣಾ ಆಯೋಗದ ತಂಡವು ತಮಿಳುನಾಡು, ಉತ್ತರ ಪ್ರದೇಶ ಹಾಗೂ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿ ಅಲ್ಲಿನ ಚುನಾವಣಾ ಪೂರ್ವಸಿದ್ಧತೆಗಳನ್ನು ಪರಿಶೀಲನೆ ನಡೆಸುತ್ತಿದೆ. ಈ ಎಲ್ಲಾ ಪ್ರಕ್ರಿಯೆಯು ಮಾರ್ಚ್ 13ರ ಒಳಗೆ ಸಂಪೂರ್ಣವಾಗಲಿದ್ದು, ಬಳಿಕ ಆಯೋಗವು ಚುನಾವಣಾ ದಿನಾಂಕ ಪ್ರಕಟ ಮಾಡಲಿದೆ. ಈ ಬಾರಿಯ ಚುನಾವಣೆಯಲ್ಲಿ ಎಐ ಬಳಕೆ ಮಾಡಲು ನಿರ್ಧರಿಸಲಾಗಿದ್ದು, ಈ ಸಂಬಂಧ ಪ್ರತ್ಯೇಕ ಘಟಕ ತೆರೆಯಲಾಗಿದೆ ಎಂದು ತಿಳಿದುಬಂದಿದೆ.