ಲಕ್ನೋ, ಫೆ 24(DaijiworldNews/AA): ಟ್ರ್ಯಾಕ್ಟರ್ ಟ್ರಾಲಿಯೊಂದು ಕೊಳಕ್ಕೆ ಉರುಳಿ 7 ಮಕ್ಕಳು ಸೇರಿ 15 ಮಂದಿ ಮೃತಪಟ್ಟು ಹಲವರು ಗಾಯಗೊಂಡ ಘಟನೆ ಉತ್ತರ ಪ್ರದೇಶದ ಕಾಸ್ ಗಂಜ್ ನಲ್ಲಿ ನಡೆದಿದೆ.
ಈ ಟ್ರ್ಯಾಕ್ಟರ್ ನಲ್ಲಿ ಮಾಘ ಪೂರ್ಣಿಮೆಯ ಪ್ರಯುಕ್ತ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲು ಹೊರಟಿದ್ದ ಯಾತ್ರಿಕರು ತೆರಳುತ್ತಿದ್ದರು. ಈ ಸಂದರ್ಭ ಟ್ರ್ಯಾಕ್ಟರ್ ಟ್ರಾಲಿ ಕೊಳಕ್ಕೆ ಉರುಳಿದ ದುರ್ಘಟನೆ ಸಂಭವಿಸಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ಗಾಯಗೊಂಡವರ ರಕ್ಷಣೆ ಮಾಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆಯ ಬಗ್ಗೆ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ. ಇನ್ನು ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.