ಚೈನ್ನೈ, ಫೆ 28 (DaijiworldNews/SK): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಜೈಲು ಶಿಕ್ಷೆಗೆ ಗುರಿಯಾಗಿದ್ದ 7 ಅಪರಾಧಿಗಳ ಪೈಕಿ ಒಬ್ಬರಾದ ಶಾಂತನ್ ಇಂದು ಬೆಳಗ್ಗೆ ಚೈನ್ನೈನಲ್ಲಿ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೂಲತ ಶ್ರೀಲಂಕಾದ ಟಿ. ಸುತೇಂದ್ರರಾಜ ಅಲಿಯಾಸ್ ಶಾಂತನ್ ( 55) ಅವರು ಬಹು ಅಂಗಾಂಗ ವೈಫಲ್ಯದಿಂದ ಇದೇ ಜನವರಿ ತಿಂಗಳಲ್ಲಿ ಚೆನ್ನೈ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
1991 ರಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅಂದಿನ ಪ್ರಧಾನಿ ರಾಜೀವ್ ಗಾಂಧಿಯನ್ನು ಶ್ರೀಲಂಕಾದಿಂದ ಭಾರತಕ್ಕೆ ಬಂದು ವ್ಯವಸ್ಥಿತವಾಗಿ ಬಾಂಬ್ ಸ್ಫೋಟಿಸಿ ಹತ್ಯೆ ಮಾಡಿದ್ದರು.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಈ ಪೈಕಿ 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. 32 ವರ್ಷಗಳ ಬಳಿಕ 6 ಅಪರಾಧಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು.