ಹಿಮಾಚಲ, ಫೆ 28(DaijiworldNews/MS): ಹಿಮಾಚಲ ಪ್ರದೇಶದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಪ್ರಮುಖ ಬೆಳವಣಿಗೆಯಲ್ಲಿ, ರಾಜ್ಯ ವಿಧಾನಸಭಾ ಸ್ಪೀಕರ್ ಪ್ರತಿಪಕ್ಷ ನಾಯಕ ಜೈರಾಮ್ ಠಾಕೂರ್ ಸೇರಿದಂತೆ 15 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ್ದಾರೆ. ವಿಧಾನಸಭೆಯ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆಯೇ ಸ್ಪೀಕರ್ ಈ ಕ್ರಮ ಕೈಗೊಂಡಿದ್ದಾರೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ಮಂಗಳವಾರ ರಾಜ್ಯದ ಏಕೈಕ ರಾಜ್ಯಸಭಾ ಸ್ಥಾನವನ್ನು ಗೆದ್ದಿತ್ತು. ಬಿಜೆಪಿ ಅಭ್ಯರ್ಥಿ ಹರ್ಷ ಮಹಾಜನ್ ಅವರು ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಅವರನ್ನು ಸೋಲಿಸಿದ್ದಾರೆ. ಪಂದ್ಯವು 34-34ರಲ್ಲಿ ಸಮಬಲಗೊಂಡಿತ್ತು ಆದರೆ ಮಹಾಜನ್ ಅವರನ್ನು ಡ್ರಾ ಮೂಲಕ ವಿಜೇತರೆಂದು ಘೋಷಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದರು. ರಾಜ್ಯಸಭಾ ಚುನಾವಣೆಯಲ್ಲಿ ಆರು ಕಾಂಗ್ರೆಸ್ ಶಾಸಕರು ಬಿಜೆಪಿ ಪರವಾಗಿ ಅಡ್ಡ ಮತದಾನ ಮಾಡಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ
68 ಸದಸ್ಯರ ವಿಧಾನಸಭೆಯಲ್ಲಿ 40 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಗೆ ಇದು ದೊಡ್ಡ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಬಿಜೆಪಿ 25 ಶಾಸಕರನ್ನು ಹೊಂದಿದ್ದು, ಮೂವರು ಶಾಸಕರು ಸ್ವತಂತ್ರರಾಗಿದ್ದಾರೆ. ಈ ನಡುವೆ ಹಿಮಾಚಲ ಪ್ರದೇಶದ 15 ಬಿಜೆಪಿ ಶಾಸಕರನ್ನು ಸ್ಪೀಕರ್ ಅಮಾನತು ಮಾಡಿದ್ದಾರೆ.