ಬೆಂಗಳೂರು, ಮಾ 04(DaijiworldNews/AA): ಎಫ್ಎಸ್ಎಲ್ ವರದಿಯಲ್ಲಿ ಘೋಷಣೆ ಕೂಗಿದ್ದು ಧೃಢಪಟ್ಟ ನಂತರವೇ ಈ ಮೂವರು ಆರೋಪಿಗಳ ಬಂಧನವಾಗಿರುವುದು ಸ್ಪಷ್ಟಾಗಿದ್ದರೂ, ಸರ್ಕಾರ ಇನ್ನೂ ಎಫ್ಎಸ್ಎಲ್ ವರದಿ ಬಹಿರಂಗ ಮಾಡದಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಭದಿಸಿದಂತೆ ಇಂದು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಆರ್ ಅಶೋಕ್ ಅವರು, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವರದಿ ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಡೆಗೂ ಜನಾಕ್ರೋಶಕ್ಕೆ ಮಣಿದು 3 ಆರೋಪಿಗಳನ್ನು ಬಂಧಿಸಿದೆ. ಕಾಂಗ್ರೆಸ್ ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲ, ಯಾರನ್ನೂ ರಕ್ಷಿಸುತ್ತಿಲ್ಲ ಎಂದಾದರೆ ಎಫ್ಎಸ್ಎಲ್ ವರದಿ ಬಹಿರಂಗ ಪಡಿಸಲು ಹಿಂಜರಿಕೆ ಯಾಕೆ ಎಂದು ತಿಳಿಸಿದ್ದಾರೆ.
ಸರ್ಕಾರ ಈ ಮೂವರು ಆರೋಪಿಗಳನ್ನು ಬಂಧಿಸಿದರೆ ಸಾಲದು, ಇವರ ಮೇಲೆ ಐಪಿಸಿಯ ಸೆಕ್ಷನ್ 124ಎ ಅಡಿ ದೇಶದ್ರೋಹ ಪ್ರಕರಣ ದಾಖಲಿಸಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನೂ ಸಹ ಈ ಪ್ರಕರಣದಲ್ಲಿ ಶಾಮೀಲು ಮಾಡಬೇಕು. ಇದರೊಂದಿಗೆ 25 ಜನರಿಗೆ ಪಾಸ್ ನೀಡಿ ಸುಮಾರು 100 ಜನ ಬೆಂಬಲಿಗರಿಗೆ ವಿಧಾನಸೌಧದ ಒಳಗೆ ಪ್ರವೇಶ ನೀಡಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ವಿಚಾರಣೆ ನಡೆಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಇಡೀ ಪ್ರಕರಣ ಕಾಂಗ್ರೆಸ್ ಪಕ್ಷದ ದೇಶಪ್ರೇಮಕ್ಕೆ, ರಾಷ್ಟ್ರ ನಿಷ್ಠೆಗೆ ಒಂದು ಅಗ್ನಿ ಪರೀಕ್ಷೆಯಾಗಿದ್ದು, ಕಾಂಗ್ರೆಸ್ ಸರ್ಕಾರದ ನಡೆಯನ್ನ ಬರೀ ಕರ್ನಾಟಕ ಅಲ್ಲ, ಇಡೀ ದೇಶದ ಜನತೆ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.