ಬೆಂಗಳೂರು, ಮಾ 11 (DajiworldNews/AK): ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ಮತ್ತು ವಿಕಲ ಚೇತನರ ಬೇಡಿಕೆಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
ಇಂದು ತಮ್ಮನ್ನು ಭೇಟಿ ಮಾಡಿದ ಅಂಗನವಾಡಿ ಮತ್ತು ವಿಕಲಚೇತನರ ಸಂಘಟನೆಗಳ ನಿಯೋಗಕ್ಕೆ ಈ ಭರವಸೆ ನೀಡಿದರು.ಅಂಗನವಾಡಿ ಕಾರ್ಯಕರ್ತೆಯರಿಗೆ 11500, 10,000 ಹಾಗೂ ಸಹಾಯಕಿಯರಿಗೆ 6000 ರೂ.ಗಳು ಸದ್ಯ ದೊರಕುತ್ತಿದೆ. ಗೌರವ ಧನವನ್ನು ಹೆಚ್ಚಿಸಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಒತ್ತಾಯಿಸಿದರು.
ಕೇಂದ್ರದಿಂದ ಬರುತ್ತಿರುವ ಅನುದಾನ ಬರುತ್ತಿಲ್ಲವಾದ್ದರಿಂದ ಆಗುತ್ತಿರುವ ಸಮಸ್ಯೆಗಳನ್ನೂ ಕಾರ್ಯಕರ್ತೆಯರು ಮುಂದಿಟ್ಟು ಸರ್ಕಾರದ ನೆರವು ಕೋರಿದರು.
ಈಗಾಗಲೇ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಘೋಷಿಸಲಾಗಿದೆ. ಅದೇ ರೀತಿ ಅಂಗನವಾಡಿ ಕೇಂದ್ರಗಳಿಗೆ ಉಚಿತ ವಿದ್ಯುತ್ ನೀಡಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ, ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನವನ್ನು 1000 ರೂ ಹೆಚ್ಚಿಸುವಂತೆ ಕೋರಿದರು.
ಈ ಬಗ್ಗೆ ಮುಂದಿನ ದಿನಗಳಲ್ಲಿ ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು