ಬೆಂಗಳೂರು, ಮಾ 18(DaijiworldNews/AA): ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದ ಸುತ್ತೋಲೆ ಪಾಲಿಸದ ಸಂಸ್ಥೆಗಳನ್ನು ಮುಚ್ಚಬಾರದು ಎಂದು ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.
ಈ ಬಗ್ಗೆ ಆದೇಶ ಹೊರಡಿಸಿದ ಹೈಕೋರ್ಟ್, ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ವ್ಯಾಪಾರ ಮಾಡುವಾಗ ಕನ್ನಡ ನಾಮಫಲಕವಿರಬೇಕು ಎಂದು ತಿಳಿಸಿದೆ.
ಮಳಿಗೆಗಳ ಸಂಘದ ಪರ ವಕೀಲರಿಗೆ ನ್ಯಾ.ಎಂ.ನಾಗಪ್ರಸನ್ನ ಶೇಕಡಾ 60ರಷ್ಟು ಕನ್ನಡ ನಾಮಫಲಕ ಹಾಕಿದರೆ ಸಮಸ್ಯೆ ಏನು ಎಂದು ಪ್ರಶ್ನಿಸಿದ್ದಾರೆ. ‘ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ-2022’ ಜಾರಿ ಸಮರ್ಪಕವಾಗಿಲ್ಲ. ಜಾರಿಯ ದಿನಾಂಕದ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಿಲ್ಲ. ಡಿಜಿಟಲ್ ನಾಮಫಲಕಗಳನ್ನು ಬದಲಿಸಲು ಸಮಯಾವಕಾಶ ಬೇಕು ಎಂದು ಮಳಿಗೆಗಳ ಸಂಘದ ಪರ ವಕೀಲರು ವಾದ ಮಂಡಿಸಿದ್ದಾರೆ.