ಬೆಂಗಳೂರು, ಮಾ 19(DaijiworldNews/AK): ನಗರ್ತ ಪೇಟೆಯ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆಗೆ ಮುಂದಾಗಿದ್ದಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಸೇರಿ ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕ ಮುಕೇಶ್ ಮೇಲೆ ಹಲ್ಲೆ ನಡೆಸಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಬಂಧನಕ್ಕೆ ಒಳಗಾದವರು ಹಲ್ಲೆ ಮಾಡಿದ ವ್ಯಕ್ತಿಗಳಲ್ಲ. ಹಲ್ಲೆ ಮಾಡಿದ ಯುವಕರನ್ನು ರಕ್ಷಿಸಲು ಬೇರೆ ಯುವಕರನ್ನು ಬಂಧಿಸಿದ್ದನ್ನು ಖಂಡಿಸಿ ಇಂದು ಪ್ರತಿಭಟನೆ ನಡೆಸಲು ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದರು.
ಅಂಗಡಿ ಮಾಲೀಕ ಮುಕೇಶ್ ಅವರು ಪ್ರತಿಭಟನಾ ರ್ಯಾಲಿಗೆ ಮುಂದಾಗುತ್ತಿದ್ದಂತೆ ಪೊಲೀಸರು ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಹೇಳಿ ಅವರನ್ನು ತಡೆದು ವಶಕ್ಕೆ ಪಡೆದಿದ್ದಾರೆ.ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ರಾಜಾಜಿನಗರದ ಶಾಸಕ ಸುರೇಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಮುಕೇಶ್, ನಾವು ಬೆಂಗಳೂರಿನಲ್ಲಿ ಇಲ್ಲ. ಹಿಂದೆ ಕಾಶ್ಮೀರದಲ್ಲಿ ಆದಂತೆ ಇಲ್ಲಿ ಆಗುತ್ತಿದೆ. ನಮ್ಮ ಮೇಲೆ ಇಲ್ಲಿ ದೌರ್ಜನ್ಯ ನಡೆಯುತ್ತಿದೆ ಎಂದು ಕಿಡಿಕಾರಿದರು.
500ಕ್ಕೂ ಹೆಚ್ಚು ಪ್ರತಿಭಟನಾಕಾರರು ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಸ್ಥಳದದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ವರ್ತಕರು ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚಿದ್ದಾರೆ.