ಹುಬ್ಬಳ್ಳಿ,ಮಾ 31(DaijiworldNews/AK): ಪರಿಶಿಷ್ಟ ಸಮುದಾಯ ಈ ಬಾರಿಯೂ ನರೇಂದ್ರ ಮೋದಿಯವರನ್ನೇ ಪ್ರಧಾನಿ ಮಾಡಲು ಸಂಕಲ್ಪ ತೊಟ್ಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಬಿಜೆಪಿ ಎಸ್ಸಿ ಮೋರ್ಚಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಸಮಾಜದಲ್ಲಿ ಸಮಾನತೆ ತರಲೆಂದು ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಜನರು ಈ ಬಾರಿಯೂ ಮೋದಿ ಬೆಂಬಲಕ್ಕೆ ನಿಂತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನರೇಂದ್ರ ಮೋದಿಯವರನ್ನು ಮೂರನೇ ಬಾರಿ ಪ್ರಧಾನಿಯನ್ನಾಗಿ ನೋಡಲು ಸಂಕಲ್ಪ ಮಾಡಿ ಬಿಜೆಪಿ ಎಸ್ಸಿ ಮೋರ್ಚಾ ಮುಖಂಡರು ಮತ್ತು ಪದಾಧಿಕಾರಿಗಳು ಬೃಹತ್ ಸಮಾವೇಶಕ್ಕೆ ಸಿದ್ಧತೆ ನಡೆಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕರ್ತರ ಸಮಾವೇಶ ಹಮ್ಮಿಕೊಂಡಿದ್ದು, ಅಗತ್ಯ ಸಿದ್ಧತೆ ನಡೆದಿದೆ ಎಂದರು.