ರಾಯ್ಪುರ,ಏ 10 (DaijiworldNews/AK): ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ ಪರಿಣಾಮ 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 14 ಮಂದಿ ಗಾಯಗೊಂಡ ಘಟನೆ ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ನಡೆದಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಮಂಗಳವಾರ ರಾತ್ರಿ 8:30 ಕ್ಕೆ ಈ ಘಟನೆ ನಡೆದಿದೆ, ದುರ್ಗದಲ್ಲಿ ಕಾರ್ಮಿಕರೊಂದಿಗೆ ತುಂಬಿದ್ದ ಬಸ್ ಹಳ್ಳಕ್ಕೆ ಬಿದ್ದಿದ್ದರಿಂದ 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 14 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ದುರ್ಗದ ಜಿಲ್ಲಾಧಿಕಾರಿ ರಿಚಾ ಪ್ರಕಾಶ್ ಚೌಧರಿ ಮಾಹಿತಿ ನೀಡಿದ್ದಾರೆ.
ಗಾಯಗೊಂಡವರಲ್ಲಿ ಹನ್ನೆರಡು ಜನರನ್ನು ಎಐಐಎಂಎಸ್ (ರಾಯಪುರ)ಗೆ ಕಳುಹಿಸಲಾಗಿದೆ. ಉಳಿದ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲರ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.
ಬಸ್ಸಿನೊಳಗೆ ಇನ್ನೂ ಸಿಲುಕಿರುವ ಪ್ರಯಾಣಿಕರನ್ನು ಹೊರತೆಗೆಯುವ ಪ್ರಕ್ರಿಯೆ ನಡೆಯುತ್ತಿದೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅಪಘಾತದ ಕುರಿತು ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿ, ಖಾಸಗಿ ಸಂಸ್ಥೆಯೊಂದರ ಉದ್ಯೋಗಿಗಳು ಪ್ರಯಾಣಿಸುತ್ತಿದ್ದ ಬಸ್ ದುರ್ಗ್ನ ಕುಮ್ಹಾರಿ ಬಳಿ ಅಪಘಾತ ಒಳಗಾಗಿರುವ ಸುದ್ದಿ ಕೇಳಿ ದುಃಖಿತನಾಗಿದ್ದೇನೆ ಎಂದಿದ್ದಾರೆ.