ಬೆಳಗಾವಿ, ಏ. 14(DaijiworldNews/AA): ರಾಜ್ಯದ ಮಹಿಳೆಯರನ್ನ ನಾನು ಪ್ರತಿನಿಧಿಸುತ್ತೇನೆ. ನಾಲಿಗೆ ಮೇಲೆ ಹಿಡಿತ ಇರಬೇಕು. ವೇದಿಕೆ ಮೇಲೆ ಇದ್ದವರು ಯಾಕೆ ತಡೆಯಲ್ಲ. ಸಂಜಯ್ ಪಾಟೀಲ್ ಮೂಲಕ ಮಾತನಾಡಿಸಿದ್ದಾರಾ? ನನಗೆ ಅಲ್ಲ ಇಡೀ ಸ್ತ್ರೀ ಕುಲಕ್ಕೆ ಮಾಡಿದ ಅವಮಾನ ಎಂದು ಸಂಜಯ್ ಪಾಟೀಲ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ ನಡೆಸಿದ್ದಾರೆ.
ಸಂಜಯ್ ಪಾಟೀಲ್ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಲಿಂಗಾಯತ ಸಮಾಜದ ಹೆಣ್ಣು ಮಗಳು. ಲಿಂಗಾಯತ ಸಮಾಜಕ್ಕೆ ಮಾಡಿದ ಅಪಮಾನ. ಇಡೀ ರಾಜ್ಯದ ಮಹಿಳೆಯರಿಗೆ ಧಿಕ್ಕರಿಸಲು ಕರೆ ಕೊಡುತ್ತೇನೆ. ಮಹಿಳೆಯ ಆತ್ಮಗೌರವಕ್ಕೆ ಧಕ್ಕೆ ಆಗಿದೆ. ಮಹಿಳೆಯರ ಸಬಲೀಕರಣ ವಿರೋಧಿಗಳು ಬಿಜೆಪಿಯವರು. ಗ್ಯಾರಂಟಿ ಯೋಜನೆಯ ಬಗ್ಗೆಯೂ ವಿರೋಧಿಸುತ್ತಾರೆ ಎಂದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ಜೊತೆಗೆ ಈ ಬಗ್ಗೆ ಸಂಜಯ್ ಪಾಟೀಲ್ ಗೆ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಈ ಸಂಬಂಧ ಶನಿವಾರ ಕಾಂಗ್ರೆಸ್ ಕಾರ್ಯಕರ್ತೆಯರು ಬೆಳಗಾವಿಯ ಆದರ್ಶ ನಗರದಲ್ಲಿರುವ ಸಂಜಯ್ ಪಾಟೀಲ್ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದರು.