ದೆಹಲಿ, ಏ. 15(DaijiworldNews/AA): ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್ ಎಸ್ ನಾಯಕಿ ಕೆ ಕವಿತಾ ಅವರನ್ನು ಏಪ್ರಿಲ್ 23 ರವರೆಗೆ ದೆಹಲಿಯ ನ್ಯಾಯಾಲಯ ಸೋಮವಾರ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಪುತ್ರಿ ಕವಿತಾ ಅವರ ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇನ್ನು ಕವಿತಾ ಅವರು ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದರು. ಇದೀಗ ಕವಿತಾ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಇಂದು ವಜಾಗೊಳಿಸಿದೆ.
ಕವಿತಾ ಅವರನ್ನು ಮಾರ್ಚ್ 15 ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಸದ್ಯ ಅವರು ತಿಹಾರ್ ಜೈಲಿನಲ್ಲಿದ್ದರು. ಕವಿತಾ ಅವರನ್ನು ಬಂಧಿಸಿದ ಬಳಿಕ ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರನ್ನು ಬಂಧಿಸಲಾಗಿತ್ತು. ಜೊತೆಗೆ ಮಾ. 21ರಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು.