ದಾವಣಗೆರೆ, ಏ. 16(DaijiworldNews/AA): ಲೋಕಸಭಾ ಚುನಾವಣೆ ಅಷ್ಟೇ ಅಲ್ಲದೇ ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮುಂದುವರೆಯಲಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಮಂಗಳವಾರ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಗಳು ಒಂದಾಗಿ ನಡೆಯಬೇಕು. ಈ ಹೊಂದಾಣಿಕೆ ಈ ಚುನಾವಣೆಗೆ ಮಾತ್ರ ಸೀಮಿತವಲ್ಲ. ಮೈತ್ರಿ ಮುಂದುವರೆಯಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯ. ಮುಂದಿನ ವಿಧಾನಸಭಾ ಚುನಾವಣೆಯವರೆಗೂ ಮೈತ್ರಿ ಮುಂದುವರೆಯಬೇಕು ಎಂಬುದು ಜನರ ಆಶಯವಾಗಿದೆ ಎಂದರು.
ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿರುವುದರಿಂದ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲು ಪ್ರಯತ್ನ ಶುರುವಾಗಿದೆ. ನಾನು 23 ಕ್ಷೇತ್ರಗಳಿಗೆರ ತೆರಳಿದ್ದು, ಉಳಿದ ಕ್ಷೇತ್ರಗಳಿಗೂ ಹೋಗುತ್ತೇನೆ. ದೇವೇಗೌಡರು ಇಳಿವಯಸ್ಸಿನಲ್ಲೂ ಪ್ರಚಾರ ಮಾಡುತ್ತಿದ್ದಾರೆ. ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಭಾರಿ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.