ಬೆಂಗಳೂರು, ಏ. 21(DaijiworldNews/AA): ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ. ರಾಜ್ಯದಲ್ಲಿ ಕೊಲೆ, ಹಲ್ಲೆ, ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಇದೊಂದು ಕ್ರೂರ ಸರ್ಕಾರವಾಗಿದೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ನಡೆದಿದ್ದು, ಸಿದ್ದರಾಮಯ್ಯ ಅವರು ತಮ್ಮದೇ ಪಕ್ಷದ ಕಾರ್ಯಕರ್ತನಿಗೆ ನ್ಯಾಯ ಕೊಡಿಸಿಲ್ಲ. ಭಾರತದ ಭವಿಷ್ಯಕ್ಕೆ ಮತ ಕೇಳುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಕಾರು ಹಾಯಿಸಿದ್ದಾರೆ. ನಟಿ ಹರ್ಷಿಕಾ ಪೂಣಚ್ಚ ಮೇಲೆ ಹಲ್ಲೆ ನಡೆಸಿದ್ದಾರೆ. ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆ ಮಾಡಿ ಅಮಾನುಷವಾಗಿ ನಡೆದುಕೊಳ್ಳಲಾಗಿದ್ದು, ಯಾವುದೇ ಕ್ರಮ ಜರುಗಿಸಿಲ್ಲ. ಕೋಲಾರ ಮತ್ತು ಶಿವಮೊಗ್ಗದಲ್ಲಿ ಔರಂಗಜೇಬ್ ಕಟೌಟ್ ಹಾಕಿದ್ದರು. ಮಂಡ್ಯದಲ್ಲಿ ಪೊಲೀಸ್ ಅಧಿಕಾರಿಗಳ ಮೂಲಕ ಹನುಮ ಧ್ವಜ ಇಳಿಸಲಾಗಿದೆ. ಈ ಎಲ್ಲಾ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದ್ದಾರೆ.
ಜನರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದು, ಜನರಿಗೆ ನೀರು, ವಿದ್ಯುತ್ ಗ್ಯಾರಂಟಿ ಇಲ್ಲ. ತೆರಿಗೆ ಹೆಚ್ಚಳವಾಗಿದೆ. ಕಾಂಗ್ರೆಸ್ ಮತಾಂಧ ಶಕ್ತಿಯನ್ನು ತಮ್ಮ ಆಡಳಿತದ ಭಾಗವಾಗಿ ಮಾಡಿಕೊಂಡಿದೆ. ಸರ್ಕಾರ ಆಡಳಿತಕ್ಕೆ ಬಂದ ಒಂದೇ ಒಂದು ವರ್ಷದಲ್ಲಿ ಮತಾಂಧರು ರಾಜ್ಯವನ್ನು ಯುದ್ಧಭೂಮಿಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.