ಬೆಂಗಳೂರು, ಏ. 21(DaijiworldNews/AA): ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದ್ದು, ಹಣಕಾಸು ವೆಚ್ಚದ ಮೇಲೆ ಹಿಡಿತ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ 54 ಸಾವಿರ ಕೋಟಿ ರೂ. ವೆಚ್ಚ ಆಗುತ್ತದೆ. ಅದಕ್ಕೆ ಬೇಕಾದ ತಯಾರಿ ಮಾಡಿಕೊಂಡಿಲ್ಲ. ಜನರ ತೆರಿಗೆ ಹಣವನ್ನು ಗ್ಯಾರಂಟಿ ಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಇದರಿಂದ ಆರ್ಥಿಕ ಬಿಕ್ಕಟ್ಟು ಉಂಟಾಗಿದೆ. ಅದನ್ನು ಮರೆ ಮಾಚಲು ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಇಷ್ಟು ದೊಡ್ಡ ಪ್ರಮಾಣದ ಬರ ಬಂದಿದೆ. ಇದುವರೆಗೂ ರಾಜ್ಯ ಸರ್ಕಾರದಿಂದ ಬರ ಪರಿಹಾರ ಕೊಟ್ಟಿಲ್ಲ ಕೇಂದ್ರದ ಅನುದಾನದಲ್ಲೇ ರೈತರಿಗೆ 2 ಸಾವಿರ ರೂ. ಪರಿಹಾರ ಹಾಕಿದ್ದಾರೆ. ಅದನ್ನೂ ಕೆಲವರಿಗೆ ನೀಡಿದ್ದು, ಇನ್ನೂ ಕೆಲವರಿಗೆ ನೀಡಿಲ್ಲ. ರಾಜ್ಯ ಸರ್ಕಾರ ತನ್ನ ಕರ್ತವ್ಯ ಮಾಡಲಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಕೇಂದ್ರದ ಕಡೆ ನೋಡುವುದಲ್ಲ. ಜನ ಸಂಕಷ್ಟದಲ್ಲಿದ್ದಾಗ ಸರ್ಕಾರ ಹೇಗೆ ನಡೆದುಕೊಳ್ಳುತ್ತದೆ ಎನ್ನುವುದು ಮುಖ್ಯ. ಇದರಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ತಿಳಿಸಿದರು.