ಬೆಂಗಳೂರು, ಮೇ.1(DaijiworldNews/AA): ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು 7 ದಿನ ಕಾಲಾವಕಾಶ ನೀಡುವಂತೆ ಸಂಸದ ಪ್ರಜ್ವಲ್ ರೇವಣ್ಣ ಅವರು ವಿಶೇಷ ತನಿಖಾ ತಂಡಕ್ಕೆ ಕೋರಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ ಸಿ.ಐ.ಡಿ ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದಿದ್ದಾರೆ.
ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ ಅವರು ಎಸ್ಐಟಿ ಮುಖ್ಯಸ್ಥರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ. ಈ ಪತ್ರದಲ್ಲಿ ನನ್ನ ಕಕ್ಷಿದಾರರಾದ ಪ್ರಜ್ವಲ್ ರವರ ಮನೆಯ ಮೇಲೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದೀರಿ. ಆದರೆ ನನ್ನ ಕಕ್ಷಿದಾರ ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು ಅವರಿಗೆ ನೋಟಿಸ್ನ ಬಗ್ಗೆ ವಿಷಯ ತಿಳಿಸಲಾಗಿದೆ ಎಂದು ಹೇಳಲಾಗಿದೆ.
ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದು ತಮ್ಮ ಮುಂದೆ ನೋಟಿಸ್ನ ಸೂಚನೆಯಂತೆ ಹಾಜರಾಗಲು 7 ದಿನಗಳ ಕಾಲಾವಕಾಶ ಅಗತ್ಯವಿರುವುದಾಗಿ ತಿಳಿಸಿದ್ದಾರೆ. ಕಕ್ಷಿದಾರರಿಗೆ ಸುಮಾರು 7 ದಿನಗಳ ಕಾಲಾವಕಾಶ ನೀಡಿ ಮತ್ತೊಂದು ದಿನಾಂಕದಂದು ತಮ್ಮ ಮುಂದೆ ವಿಚಾರಣೆಗಾಗಿ ಹಾಜರಾಗಲು ಅವಕಾಶ ನೀಡಬೇಕೆಂದು ತಿಳಿಸಲಾಗಿದೆ.