ಶಿವಮೊಗ್ಗ, ಮೇ.2(DaijiworldNews/AK): ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
ಅವರು ಇಂದು ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ಗೆಲುವನ್ನು ಖಚಿತಪಡಿಸಿ ಮಾತನಾಡಿದರು.
ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದ್ದರೂ ರಾಜ್ಯದ ಪರವಾಗಿ, ಜಿಲ್ಲೆಯ ಪರವಾಗಿ ಪಾರ್ಲಿಮೆಂಟಿನಲ್ಲಿ ನೆಪಕ್ಕೂ ಬಾಯಿ ಬಿಡದ ಬಿ.ವೈ.ರಾಘವೇಂದ್ರ ಸಂಸದರಾಗಿದ್ದೇ ವೇಸ್ಟ್ . ಬಿಜೆಪಿಯಿಂದ ಗೆದ್ದ 25 ಮಂದಿ ಸಂಸದರು ರಾಜ್ಯದ ಪರವಾಗಿ ಯಾವತ್ತೂ ಧ್ವನಿ ಎತ್ತಲಿಲ್ಲ. ಇಂಥವರನ್ನು ಗೆಲ್ಲಿಸಿ ನಿಮಗಾಗಲೀ, ರಾಜ್ಯಕ್ಕಾಗಲೀ, ಜಿಲ್ಕೆಗಾಗಲಿ ಏನೇನೂ ಪ್ರಯೋಜನವಿಲ್ಲ ಎಂದರು.
ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ. ಬರಗಾಲ ಬಂದಾಗ, ಪ್ರವಾಹ ಬಂದಾಗಲೂ ರಾಜ್ಯ ನೆನಪಾಗಲಿಲ್ಲ. ರಾಜ್ಯಕ್ಕೆ ನಿರಂತರವಾಗಿ
ಅನ್ಯಾಯ ಮಾಡುತ್ತಲೇ ಇರುವ ಮೋದಿ ದ್ವೇಷದ ರಾಜಕಾರಣ ಮಾಡಿ, ಮಲತಾಯಿ ಧೋರಣೆಯನ್ನು ತೋರಿ ದೊಡ್ಡ ಅನ್ಯಾಯ ಮಾಡುತ್ತಿದೆ. ಪ್ರವಾಹ ಅಥವಾ ಬರಗಾಲ ಬಂದಾಗ ರಾಜ್ಯಕ್ಕೆ ಬಂದು ಜನರ ಕಷ್ಟ ಸುಖ ಕೇಳುವ ಪ್ರಯತ್ನವನ್ನೂ ಮೋದಿ ಮಾಡಲೇ ಇಲ್ಲ ಎಂದರು.
ಎನ್ ಡಿ ಆರ್ ಎಫ್ ಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು:
ರಾಜ್ಯಕ್ಕೆ ಭೀಕರ ಬರಗಾಲದ ಪರಿಸ್ಥಿತಿ ಎದುರಾದರೂ ಸಹ ಕೇಂದ್ರ ಬರಪರಿಹಾರವನ್ನು ಬಿಡುಗಡೆ ಮಾಡಲಿಲ್ಲ. ಕರ್ನಾಟಕದಲ್ಲಿ 48 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿ, 35 ಸಾವಿರ ಕೋಟಿ ನಷ್ಟವಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ನಮ್ಮ ಸಂಪನ್ಮೂಲಗಳಿಂದ ತಲಾ ಎರಡು ಸಾವಿರದಂತೆ 34 ಲಕ್ಷ ರೈತರಿಗೆ ಪರಿಹಾರ ನೀಡಲಾಯಿತು.
ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ರಾಜ್ಯಕ್ಕೆ 18172 ಕೋಟಿ ರೂ.ಗಳ ಬರ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಎನ್ ಡಿ ಆರ್ ಎಫ್ ಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು.ರಾಜ್ಯಕ್ಕಾದ ಅನ್ಯಾಯವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರ ಕೇವಲ 3454 ಕೋಟಿ ರೂ.ಗಳನ್ನು ನೀಡಿ ಮತ್ತೆ ಮತ್ತೆ ದ್ರೋಹ ಮಾಡುತ್ತಲೇ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.