ನವದೆಹಲಿ, ಮೇ.8(DaijiworldNews/AA): ಭಾರತ ಹಾಗೂ ಮಾಲ್ಡೀವ್ಸ್ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ, ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಅವರು ಗುರುವಾರ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಮಾಲ್ಡೀವ್ಸ್ ಸಚಿವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರೊಂದಿಗೆ ಪರಸ್ಪರ ಹಿತಾಸಕ್ತಿಯ ದ್ವಿಪಕ್ಷೀಯ ಮತ್ತು ಪ್ರಾದೇಶಿಕ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.
ಈ ಭೇಟಿಯು ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಹಕಾರಕ್ಕೆ ಮತ್ತಷ್ಟು ವೇಗವನ್ನು ನೀಡಲಿದೆ. ಇನ್ನು ಅಧಿಕಾರ ವಹಿಸಿಕೊಂಡ ನಂತರ ಇದು ಮಾಲ್ಡೀವ್ಸ್ ವಿದೇಶಾಂಗ ಸಚಿವ ಜಮೀರ್ ಅವರ ಮೊದಲ ಅಧಿಕೃತ ಭಾರತ ಭೇಟಿಯಾಗಿದೆ.