ಬೆಂಗಳೂರು, ಮೇ. 19(DaijiworldNews/AA): ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸ್ ಅಧಿಕಾರಿಗಳಿಗೆ ಧಮ್ಕಿ ಹಾಕುವ ಮೂಲಕ ಬಿಜೆಪಿ ಎಂದಿಗೂ ಕ್ರಿಮಿನಲ್ ಗಳ ರಕ್ಷಕರು ಎಂಬುದನ್ನು ಸಾಬೀತು ಮಾಡಿದ್ದಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಬೆಳ್ತಂಗಡಿ ಪೊಲೀಸ್ ಠಾಣೆಗೆ ನುಗ್ಗಿ ಶಾಸಕ ಹರೀಶ್ ಪೂಂಜಾ ಅವರು ಪೊಲೀಸ್ ಅಧಿಕಾರಿಗಳಿಗೆ ಧಮ್ಕಿ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಹಾಗೂ ಪೊಲೀಸ್ ಇಲಾಖೆಯ ಬಗ್ಗೆ ಮತ್ತು ಪೊಲೀಸ್ ಅಧಿಕಾರಿಗಳ ಬಗ್ಗೆ ಅಸಂವಿಧಾನಿಕ ಶಬ್ದಗಳಲ್ಲಿ ಮಾತನಾಡಿ, ದುರ್ವರ್ತನೆ ತೋರಿರುತ್ತಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸಲು ಬಿಜೆಪಿ ಹಲವು ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದೆ.
ಇನ್ನು ಪೊಲೀಸರ ನೈತಿಕ ಸ್ಥೈರ್ಯವನ್ನು ಕಸಿಯುತ್ತ, ಕ್ರಿಮಿನಲ್ ಗಳಿಗೆ ಬೆಂಬಲ ನೀಡುತ್ತ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತಹ ರಾಜ್ಯ ಬಿಜೆಪಿಯ ಕೆಲಸಗಳಿಗೆ ಕಡಿವಾಣ ಹಾಕುವುದಕ್ಕೆ ನಮ್ಮ ಸರ್ಕಾರ ಸಮರ್ಥವಾಗಿದೆ ಎಂದು ಕಾಂಗ್ರೆಸ್ ಬರೆದುಕೊಂಡಿದೆ. ಜೊತೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಕ್ರಮ ದಂಧೆಕೋರರು ಹದ್ದು ಮೀರಿದ್ದರು. ಬಿಜೆಪಿಯ ರೌಡಿ ಮೋರ್ಚಾದಿಂದಾಗಿ ಕ್ರಿಮಿನಲ್ ಗಳು ಕಾನೂನಿನ ಭಯ ಕಳೆದುಕೊಂಡಿರುತ್ತಾರೆ. ಆದರೆ ನಮ್ಮ ಕಾಂಗ್ರೆಸ್ ಸರ್ಕಾರ ಬಿಜೆಪಿ ಅಧಿಕಾರಾವಧಿಯಲ್ಲಿ ಹದ್ದು ಮೀರಿದ್ದವರನ್ನು ಕಠಿಣ ಕಾನೂನು ಕ್ರಮದ ಮೂಲಕ ತಹಬದಿಗೆ ತರಲಿದೆ ಎಂದು ತಿಳಿಸಿದೆ.