ಬೆಂಗಳೂರು, ಮೇ 22 (DaijiworldNews/AA): ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರ ಕನ್ನಡಿಗರ ಹಿತಾಸಕ್ತಿ ಕಾಪಾಡುವಲ್ಲಿ ವಿಫಲವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ಪರವಾಗಿ ಸಮರ್ಥ ವಾದ ಮಂಡಿಸಲು ಸಿದ್ಧರಾಗಬೇಕೆಂದು ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿ ಕಾಲಹರಣ ಮಾಡಿದೆ. ಇದೀಗ ರಾಜ್ಯ ಸರ್ಕಾರ ತಮಿಳುನಾಡಿಗೆ 2.5 ಟಿಎಂಸಿ ನೀರು ಬಿಡಲು ಮುಂದಾಗಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತೊಮ್ಮೆ ಕಾವೇರಿ ಮಡಿಲನ್ನು ಬರಿದು ಮಾಡಿ ಕನ್ನಡಿಗರಿಗೆ ದ್ರೋಹ ಎಸಗಲು ಹೊರಟಿದ್ದಾರೆ ಎಂದು ದೂರಿದ್ದಾರೆ.
ಕಳೆದ ಒಂದು ವಾರದಲ್ಲಿ 1 ಟಿಎಂಸಿ ನೀರು ಕನ್ನಂಬಾಡಿ ಕಟ್ಟೆಗೆ ಹರಿದು ಬಂದಿದ್ದು, ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕರ್ನಾಟಕಕ್ಕೆ ಮಂಗಳವಾರ ನಿರ್ದೇಶನ ನೀಡಿತ್ತು.