ಚಿತ್ರದುರ್ಗ, ಮೇ 28 (DaijiworldNews/MS): ಶಿಕ್ಷಣ ಕ್ಷೇತ್ರದ ಪಾವಿತ್ರ್ಯತೆ ಕಾಪಾಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಚಿತ್ರದುರ್ಗದಲ್ಲಿಂದು ತಿಳಿಸಿದ್ದಾರೆ.
ಶಿಕ್ಷಣ ಮತ್ತು ಶಿಕ್ಷಕರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಶ್ರಮಿಸುತ್ತಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ತರಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ , ಶೈಕ್ಷಣಿಕ ಪ್ರಗತಿಗೆ ಪೂರಕವಾದ ಹಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.
ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ಸರ್ಕಾರ ಉತ್ತಮವಾಗಿ ಸ್ಪಂದಿಸಿದೆ. ಈ ಬಾರಿಯ ಶಿಕ್ಷಕ ಹಾಗೂ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಅಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಸೇರಿದಂತೆ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.