ಬೆಂಗಳೂರು, ಜೂ. 05(DaijiworldNews/AA): ನಾನು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಮತ್ತು ಕುಮಾರಸ್ವಾಮಿಯವರೇ ಕಾರಣ. ಹೀಗಾಗಿ ನನ್ನ ಗೆಲುವಿಗೆ ಬಿಜೆಪಿ ಎಷ್ಟು ಕಾರಣವೋ ಜೆಡಿಎಸ್ ಕೂಡ ಅಷ್ಟೇ ಕಾರಣವಾಗಿದೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ವಿಜೇತ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಹೆಚ್ ಡಿ ಕುಮಾರಸ್ವಾಮಿಯವರನ್ನು ಅವರ ನಿವಾಸದಲ್ಲಿ ಭೇಟಿಯಾದ ಬಳಿಕ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಹೆಚ್ ಡಿ ದೇವೇಗೌಡರು ಮತ್ತು ಕುಮಾರಸ್ವಾಮಿಯವರ ಪ್ರಸ್ತಾಪವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಬಿಜೆಪಿ ನಾಯಕರು ಒಪ್ಪಿದರು. ಅವರೆಲ್ಲರಿಗೆ ತಾನು ಋಣಿಯಾಗಿರುವೆ ಎಂದರು.
ರಾಜ್ಯ ರಾಜಕೀಯದಲ್ಲಿ ಒಂದು ಹೊಸ ಅಧ್ಯಾಯ ಆರಂಭವಾಗಿದೆ. ಯಾರಿಗೆ ಗೌರವ ಸಲ್ಲಿಸಬೇಕು ಅನ್ನೋದನ್ನು ಜನರು ಚೆನ್ನಾಗಿ ತಿಳಿದುಕೊಂಡಿದ್ದಾರೆ. ರಾಜಕಾರಣವೇ ಬದುಕಲ್ಲ. ಅದೊಂದು ಅವಕಾಶ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ನಾನು ಆ ಅವಕಾಶವನ್ನು ಉಪಯೋಗಿಸಿಕೊಂಡಿದ್ದೇನೆ ಎಂದು ತಿಳಿಸಿದರು.
ತುಮಕೂರು ಕ್ಷೇತ್ರದಲ್ಲಿ ಬಿಜೆಪಿಯ ವಿ.ಸೋಮಣ್ಣ ಅವರು 7,05,481 ಮತಗಳನ್ನು ಪಡೆದರೆ, ಕಾಂಗ್ರೆಸ್ನ ಎಸ್.ಪಿ.ಮುದ್ದಹನುಮೇಗೌಡ ಅವರು 5,36,160 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ವಿ. ಸೋಮಣ್ಣ ಅವರು 1,69311 ಮತಗಳ ಅಂತರದಿAದ ಗೆಲುವು ಸಾಧಿಸಿದ್ದಾರೆ.