ನವದೆಹಲಿ, ಜೂ. 11(DaijiworldNews/AA): ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ರಾಜ್ಯದ ನಾಲ್ವರು ಸಂಸದರಾದ ಹೆಚ್ ಡಿ ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಶಿ ವಿ.ಸೋಮಣ್ಣ ಅವರಿಗೆ ಖಾತೆ ಹಂಚಿಕೆಯಾಗಿದ್ದು, ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.
ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವರಾಗಿ ಕರ್ನಾಟಕದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು, ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ರಾಜ್ಯಖಾತೆ ಸಚಿವೆಯಾಗಿ ಶೋಭಾ ಕರಂದ್ಲಾಜೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾಗಿ ಪ್ರಹ್ಲಾದ್ ಜೋಶಿ ಹಾಗೂ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾಗಿ ವಿ.ಸೋಮಣ್ಣ ಅವರು ನೇಮಕಗೊಂಡಿದ್ದಾರೆ. ಈ ನಾಲ್ವರು ಸಚಿವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು, 2047 ರ ವೇಳೆಗೆ ಭಾರತದ ಇಂಧನ ಸ್ವಾತಂತ್ರ್ಯ ಸಾಧಿಸುವುದು ನಮ್ಮ ಸಂಕಲ್ಪವಾಗಿದೆ. ನವೀಕರಿಸಬಹುದಾದ ಇಂಧನದಲ್ಲಿ ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ಮಾಡುವ ದೃಷ್ಟಿಯೊಂದಿಗೆ ನಾವು ಮುಂದುವರಿಯುತ್ತೇವೆ ಎಂದು ತಿಳಿಸಿದರು.