ಬೆಂಗಳೂರು, ಜೂ. 21 (DaijiworldNews/AA): ಅಪಹರಣ ಪ್ರಕರಣದ ಆರೋಪಿಯಾಗಿರುವ ಮಾಜಿ ಸಚಿವ ಹೆಚ್. ಡಿ. ರೇವಣ್ಣ ಅವರ ಜಾಮೀನು ರದ್ದು ಕೋರಿ ಎಸ್ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಅವರಿಗೆ ಮೇ 13ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು. ಈ ಜಾಮೀನು ರದ್ದುಪಡಿಸುವಂತೆ ಕೋರಿ ಎಸ್ಐಟಿ ಅರ್ಜಿ ಸಲ್ಲಿಸಿದೆ. ಆದರೆ, ಅರ್ಜಿಗೆ ರೇವಣ್ಣ ಸಲ್ಲಿಸಿರುವ ಆಕ್ಷೇಪಣೆಗೆ ಪ್ರತಿ ಆಕ್ಷೇಪಣೆ ಸಲ್ಲಿಸಲು ಎಸ್ಐಟಿ ಕಾಲಾವಕಾಶ ಕೋರಿದ ಹಿನ್ನೆಲೆ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಕೆ.ಆರ್.ನಗರದ ಸಂತ್ರಸ್ತೆಯ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. 6 ದಿನಗಳ ಬಳಿಕ ಅಂದರೆ ಮೇ 13ರಂದು ರೇವಣ್ಣ ಅವರಿಗೆ ಜಾಮೀನು ದೊರೆತಿತ್ತು. ನಂತರ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಮೇ 20ರಂದು ಜಾಮೀನು ಮಂಜೂರಾಗಿತ್ತು. ನಂತರ ಎರಡು ಎಫ್ಐಆರ್ ರದ್ದು ಮಾಡುವಂತೆ ರೇವಣ್ಣ ನ್ಯಾಯಾಲಯದ ಮೆಟ್ಟಿಲೇರಿದ್ದರು.