ಬೆಂಗಳೂರು, ಜೂ. 21 (DaijiworldNews/AA): ಜನರೇ ನನ್ನ ಹಿಂದೆ ಇರುವ ಶಕ್ತಿ. ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡುವುದು ಜನರೇ ಹೊರತು, ಬೇರೆ ಯಾರೂ ಅಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಚನ್ನಪಟ್ಟಣದಿಂದ ಸ್ಪರ್ಧೆ ಮಾಡಿದರೆ ಶಿವಕುಮಾರ್ ಅವರ ರಾಜಕೀಯ ಭವಿಷ್ಯ ಅಂತ್ಯವಾಗಲಿದೆ ಎಂಬ ಸಿ.ಪಿ ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ರಾಜಕೀಯ ಅಂತ್ಯ ತೀರ್ಮಾನ ಮಾಡುವವರು ಜನರು. ಯೋಗೇಶ್ವರ್ ದೊಡ್ಡವರು, ಅವರ ಮಾತಿಗೆ ಪ್ರತಿಕ್ರಿಯೆ ನೀಡುವಷ್ಟು ಸಮಯ ನನ್ನ ಬಳಿ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.
ನಾನೂ ಕೂಡ ರಾಮನಗರ ಜಿಲ್ಲೆಯವನು. ನಿಮ್ಮ ಋಣ ತೀರಿಸಲು ನಾನು ಬದ್ಧನಿದ್ದೇನೆ, ಶಕ್ತಿ ಕೊಡಿ ಎಂದು ಆ ಕ್ಷೇತ್ರದ ಜನರ ಬಳಿ ಕೇಳಿಕೊಂಡಿದ್ದೇನೆ. ನನ್ನ ಮೇಲೆ ವಿಶ್ವಾಸವಿದ್ದರೆ ಬೆಂಬಲ ನೀಡುತ್ತಾರೆ ಎಂದು ಹೇಳಿದರು.
ಸ್ವಪ್ರತಿಷ್ಠೆಗಾಗಿ ದೇಶದ ಸಂಪತ್ತು ಹಾಳು ಮಾಡುತ್ತಿದ್ದಾರೆ ಎಂಬ ಸುರೇಶ್ ಕುಮಾರ್ ಅವರ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಬೈ ಎಲೆಕ್ಷನ್ ನಡೆದರೆ ಕನಕಪುರದಲ್ಲಿ ಯಾಕೆ ಉಪಚುನಾವಣೆ ನಡೆಯುತ್ತದೆ? ನಾನು ಕನಕಪುರದ ಶಾಸಕ. ಪಕ್ಷದ ಅಧ್ಯಕ್ಷನಾಗಿ ನನ್ನ ಮೇಲೆ ಜವಾಬ್ದಾರಿ ಇದೆ. ಇದೂ ನನ್ನದೇ ಕ್ಷೇತ್ರ, ನನ್ನದೇ ನಾಯಕತ್ವ. ಸಿದ್ದರಾಮಯ್ಯ ಹಾಗೂ ನಾನು ಸೇರಿ ಚುನಾವಣೆ ನಡೆಸುತ್ತೇವೆ ಎಂದಿದ್ದಾರೆ.