ನವದೆಹಲಿ,ಜೂ 29 (DaijiworldNews/MS): ನೀಟ್ ಹಗರಣದಲ್ಲಿ ಭಾಗಿಯಾದ ಪ್ರತಿಯೊಬ್ಬರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಸಂಸತ್ ಭವನದ ಆವರಣದಲ್ಲಿ ಮಾತನಾಡಿದ ಅವರು, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ರಾಷ್ಟ್ರಪತಿ ಭಾಷಣದಲ್ಲೂ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಲಾಗಿದೆ. ಸಂಸತ್ ನಲ್ಲಿ ಈ ಕುರಿತು ಪ್ರತ್ಯೇಕ ಚರ್ಚೆ ಅಗತ್ಯವಿಲ್ಲ. ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಯಲ್ಲಿ ವಿಪಕ್ಷಗಳು ಈ ವಿಷಯವನ್ನು ಪ್ರಸ್ತಾಪಿಸಬಹುದು. ಸರ್ಕಾರ ಉತ್ತರ ನೀಡಲು ಸಮರ್ಥವಾಗಿದೆ ಎಂದರು. ನೀಟ್ ಹಗರಣದ ಬಗ್ಗೆ ಸಿಬಿಐ ತನಿಖೆ ಪ್ರಗತಿಯಲ್ಲಿದ್ದು, ಪರೀಕ್ಷಾ ಸುಧಾರಣೆಗಳಿಗಾಗಿ ಇಸ್ರೋ ಮಾಜಿ ಅಧ್ಯಕ್ಷ ಡಾ. ರಾಧಾಕೃಷ್ಣನ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.
ಶೀಘ್ರದಲ್ಲೇ ನೀಟ್ ಪರೀಕ್ಷೆಗೆ ಎನ್ ಟಿಎ ದಿನಾಂಕಗಳನ್ನು ಘೋಷಿಸಲಿದೆ. ಸುಪ್ರೀಂ ಕೋರ್ಟ್ ಕಣ್ಗಾವಲಿನಲ್ಲಿ ಎಲ್ಲ ಪ್ರಕ್ರಿಯೆಗಳು ನಡೆಯುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸುವುದು ತರವಲ್ಲ. ಈ ವಿಚಾರದಲ್ಲಿ ವಿಪಕ್ಷಗಳು ರಾಜಕಾರಣ ಬಿಟ್ಟು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೂಕ್ತ ಸಹಕಾರ ನೀಡಬೇಕು ಎಂದರು.