ಲಕ್ನೋ, ಜು.03(DaijiworldNews/AA): ಹತ್ರಾಸ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ಹಾಗೂ ಗಾಯಾಳುಗಳಿಗೆ ನೀಡುವ ಪರಿಹಾರ ಮೊತ್ತ ಹೆಚ್ಚಳ ಮಾಡಿರುವುದಾಗಿ ಸಿಎಂ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೃತರ ಕುಟುಂಬಗಳಿಗೆ ತಲಾ 4 ಲಕ್ಷ, ಗಾಯಾಳುಗಳಿಗೆ ತಲಾ 1 ಲಕ್ಷ ನೀಡುವುದಾಗಿ ಘೋಷಣೆ ಮಾಡಿರುವ ಅವರು, ಪ್ರಕರಣದ ತನಿಖೆಯನ್ನು ಎಸ್ಐಟಿಗೆ ನೀಡಲಾಗುತ್ತದೆ. ಸದ್ಯದ ಮಟ್ಟಿಗೆ ಭಕ್ತರ ರಕ್ಷಣೆ ಮತ್ತು ಸುರಕ್ಷತೆಗೆ ಒತ್ತು ನೀಡುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ.
ಸತ್ಸಂಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರ ಪೈಕಿ 121 ಭಕ್ತರು ಸಾವನ್ನಪ್ಪಿದ್ದಾರೆ. ಯುಪಿ, ಹರಿಯಾಣ, ಮಧ್ಯಪ್ರದೇಶ ಮತ್ತು ರಾಜಸ್ಥಾನದಿಂದ ಭಕ್ತರು ಈ ಕಾರ್ಯಕ್ರಮಕ್ಕೆ ಬಂದಿದ್ದರು. ಸದ್ಯ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಹುತೇಕ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದರು.
ನಾನು ಹಲವಾರು ಪ್ರತ್ಯಕ್ಷದರ್ಶಿಗಳೊಂದಿಗೆ ಮಾತನಾಡಿದ್ದೇನೆ. ಕಾರ್ಯಕ್ರಮ ಮುಗಿದ ಬಳಿಕ ಸತ್ಸಂಗದ ಪ್ರಚಾರಕರು ಬರುತ್ತಿದ್ದಾಗ ಘಟನೆ ನಡೆದಿದೆ ಎಂದು ತಿಳುದುಬಂದಿದೆ. ವೇದಿಕೆಯಿಂದ ಕೆಳಗೆ ಬಾಬಾ ಇಳಿಯುತ್ತಿದ್ದಂತೆ, ಹಲವಾರು ಮಹಿಳೆಯರು ಅವರ ಆಶೀರ್ವಾದ ಪಡೆಯಲು ಮುಂದಾಗಿದ್ದಾರೆ. ಅವರನ್ನು ತಡೆಯುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎಂದು ಹೇಳಿದರು.