ಬೆಂಗಳೂರು, ಜು. 12(DaijiworldNews/AA): ಕಾಂಗ್ರೆಸ್ ನವರದ್ದು ಗೂಂಡಾ ಸರ್ಕಾರ. ನಮ್ಮ ಮೇಲೆ ಪೊಲೀಸರಿಂದ ದೌರ್ಜನ್ಯ ಮಾಡಿಸುವ ಕೆಲಸ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಕಾಂಗ್ರೆಸ್ ನ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮ ಹಗರಣಗಳು ಈ ಸರ್ಕಾರಕ್ಕೆ ಎರಡು ಕಪ್ಪು ಚುಕ್ಕೆಗಳು ಇದ್ದಂತೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೇ ಬರೀ ಲೂಟಿ ಮಾಡುವುದಷ್ಟೇ ಕೆಲಸ ಆಗಿದೆ ಎಂದು ಹೇಳಿದರು.
ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಬಿಜೆಪಿ ಮುಖಂಡರನ್ನು ಮನೆ ಬಳಿಯೇ ಬಂಧಿಸುವ ಕೆಲಸ ಮಾಡುತ್ತಿದ್ದು, ಇದು ಸರಿಯಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ತುರ್ತುಪರಿಸ್ಥಿತಿ ಜಾರಿಗೊಳಿಸಿದೆ ಎನಿಸುತ್ತಿದೆ. ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸುವ ಕೆಲಸ ಮಾಡುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.
ಸಿಎಂ ಸಿದ್ದರಾಮಯ್ಯ ಸರ್ಕಾರ ಬರೀ ಹಗರಣಗಳ ಸರಮಾಲೆಯಾಗಿದೆ. ವಾಲ್ಮೀಕಿ ನಿಗಮದ ದಲಿತರ ನೂರು ಪರ್ಸೆಂಟ್ ಹಣ ನುಂಗಿದ್ದಾರೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳಗಿದೆ. ಮೈಸೂರು ಮುಡಾ ಹಗರಣ ಹೊರತೆಗೆದ ಸಂದರ್ಭದಲ್ಲಿ ಬಿಜೆಪಿಗೆ ಮಾಡೋದಕ್ಕೆ ಕೆಲಸ ಇಲ್ಲ ಎಂದರು ಸಿದ್ದರಾಮಯ್ಯ. ನಾವು ಜನರ ಮುಂದೆ ಇಡುತ್ತಾ ಇದ್ದೇವೆ. ಅಂತಿಮವಾಗಿ ಜನ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.
ಬಿಜೆಪಿ ಪ್ರತಿಭಟನೆಗೆ ರಾಜ್ಯ ಸರ್ಕಾರ ಗಢಗಢ ನಡುಗಿದೆ. ಬಿಜೆಪಿ ಹೋರಾಟದ ಫಲವಾಗಿ ಒಂದು ವಿಕೆಟ್ ಬಿದ್ದಿದೆ. ಕಾಂಗ್ರೆಸ್ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ. ಇದು ಕರ್ನಾಟಕದ ಇತಿಹಾಸದಲ್ಲೇ ಸರ್ಕಾರಕ್ಕೆ ಅಂಟಿದ ಎರಡು ಕಪ್ಪು ಚುಕ್ಕೆಗಳಾಗಿವೆ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದರು.