ಬೆಂಗಳೂರು, ಜು. 14 (DaijiworldNews/AK): ಜು.22ರಿಂದ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವಪ್ರಾಥಮಿಕ (ಎಲ್ಕೆಜಿ, ಯುಕೆಜಿ) ಶಾಲೆ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜುಲೈ 22ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಸಾಂಕೇತಿಕವಾಗಿ ಆರಂಭವಾಗಲಿದೆ. ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಕ್ರಮಕೈಗೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ 15-20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಕೂಡ ಆರಂಭಿಸುತ್ತೇವೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಜೀವವಿಮಾ ಯೋಜನೆ ಕುರಿತು ಶೀಘ್ರ ನಿರ್ಧಾರ ಮಾಡಲಾವುದು ಎಂದು ಹೇಳಿದರು.