ಬೆಂಗಳೂರು, ಜು. 1(DaijiworldNews/AK): ತಮಿಳುನಾಡಿಗೆ ನಿತ್ಯ 1 ಟಿಎಂಸಿ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ಆದೇಶಿಸಿದ್ದು, ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ವಿರೋಧ ಪಕ್ಷದ ನಾಯಕರು ಸಹಮತ ಸೂಚಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಸದ್ಯಕ್ಕೆ ತಮಿಳುನಾಡಿಗೆ ನೀರು ಹರಿಸುವುದು ಬೇಡ ಎಂದು ಒತ್ತಾಯಿಸಿದ್ದಾರೆ. ಆದ್ರೆ, ಕಾನೂನಾತ್ಮಕವಾಗಿ ಹೋರಾಟ ಮಾಡಲು ಅಂತಿಮವಾಗಿ 11,000 ಕ್ಯೂಸೆಕ್ ಬದಲಿಗೆ 8 ಸಾವಿರ ಕ್ಯುಸೆಕ್ ನೀರು ಬಿಡಲು ನಿರ್ಧಾರ ಮಾಡಲಾಗಿದೆ.
ಸರ್ವಪಕ್ಷಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ನಿತ್ಯ 11,000 ಕ್ಯೂಸೆಕ್ ನೀರು ಬದಲು 8000 ಕ್ಯೂಸೆಕ್ ಬಿಡುಗಡೆ ಮಾಡಿ ಕಾನೂನು ಹೋರಾಟ ಮಾಡುತ್ತೇವೆ. CWRC ಶಿಫಾರಸು ವಿರುದ್ಧ CWMAಗೆ ಮೇಲ್ಮನವಿ ಸಲ್ಲಿಸುತ್ತೇವೆ. ಮಳೆ ಕಡಿಮೆಯಾದರೆ 8000 ಕ್ಯೂಸೆಕ್ಗಿಂತ ಕಡಿಮೆ ಬಿಡುತ್ತೇವೆ. ಒಂದು ವೇಳೆ ಮಳೆ ಹೆಚ್ಚಾದರೆ CWRC ಶಿಫಾರಸಿನಂತೆ ನೀರು ಬಿಡುಗಡೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಇನ್ನು ಸರ್ವಪಕ್ಷಗಳ ಸಭೆಯ ಆರಂಭದಲ್ಲಿ ವಿಪಕ್ಷಗಳ ನಾಯಕರು ಮಾತನಾಡಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುವುದು ಬೇಡ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಆದ್ರೆ, ಈ ವೇಳೆ ಲೀಗಲ್ ಟೀಮ್ನ ಮೋಹನ್ ಕಾತರಕಿ ಮಾತನಾಡಿ, 1 ಟಿಎಂಸಿ ಬದಲಿಗೆ 8 ಸಾವಿರ ಕ್ಯೂಸೆಕ್ ನೀರು ಬಿಡುವುದು ಸೂಕ್ತ ಎಂದು ಸಲಹೆ ನೀಡಿದರು. ನಂತರ ಇವರ ಸಲಹೆಗೆ ಸರ್ವಪಕ್ಷಗಳ ನಾಯಕರು ಸಹ ಒಪ್ಪಿಗೆ ಸೂಚಿಸಿದರು.
ತಮಿಳುನಾಡಿಗೆ ನಿತ್ಯ 1 ಟಿಎಂಸಿ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ಆದೇಶಿಸಿತ್ತು. ಇದರ ಬೆನ್ನಲ್ಲೇ ಮೊನ್ನೆ ಸಿದ್ದರಾಮಯ್ಯನವರು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಹೇಳಿದ್ದರೆ. ಆದ್ರೆ, ಇದೀಗ ಸರ್ವಪಕ್ಷಗಳ ಸಭೆಯಲ್ಲಿ ನಿತ್ಯ 1 ಟಿಎಂಸಿ ಬದಲಾಗಿ 8 ಸಾವಿರ ಕ್ಯೂಸೆಕ್ ನೀರು ಹರಿಸಲು ತೀರ್ಮಾನಿಸಲಾಗಿದೆ.