ತುಮಕೂರು, ಆ 14(DaijiworldNews/MS): ತುಮಕೂರು ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ೬ ಲಕ್ಷ ೯೨ ಸಾವಿರದ ೫೦೮ ಪಡಿತರ ಚೀಟಿಗಳ ಪೈಕಿ ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಿ ರದ್ದುಪಡಿಸಬೇಕೆಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಸೂಚಿಸಿದ್ದಾರೆ.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆದಾಯ ತೆರಿಗೆ ಪಾವತಿ ಮಾಡುವ, ಕುಟುಂಬದ ಆದಾಯ 1.20ಲಕ್ಷಕ್ಕಿಂತ ಹೆಚ್ಚಿರುವ, ಸರ್ಕಾರಿ ನೌಕರರು, ೩ ಹೆಕ್ಟೇರ್ಗಿಂತ ಹೆಚ್ಚು ಭೂಮಿ ಹೊಂದಿರುವ ಪಡಿತರ ಚೀಟಿಗಳನ್ನು ರದ್ದುಪಡಿಸಲು ಹಿಂದಿನ ಸಭೆಯಲ್ಲಿ ಸೂಚಿಸಲಾಗಿದ್ದರೂ ಕೇವಲ ೯೮ ಸಾವಿರದ ೮೯೩ ಪಡಿತರ ಚೀಟಿಗಳನ್ನು ಮಾತ್ರ ರದ್ದುಪಡಿಸಲಾಗಿದೆ. ಉಳಿದ ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ ಅವರಿಗೆ ಸೂಚನೆ ನೀಡಿದ್ದಾರೆ.